ಲಖನೌ: ಉತ್ತರ ಪ್ರದೇಶದ (Uttar Pradesh) ಝಾನ್ಸಿ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಮಕ್ಕಳ ವಾರ್ಡ್ನಲ್ಲಿದ್ದ 10 ನವಜಾತ ಶಿಶುಗಳು ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ( Narendra Modi) ಶನಿವಾರ ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ (UP Govt) ಹಾಗೂ ಸ್ಥಳೀಯ ಆಡಳಿತ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ, ʼʼಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಅಗ್ನಿ ಅವಘಡ ಹೃದಯ ವಿದ್ರಾವಕ ಘಟನೆಯಾಗಿದೆ. ಅವಘಡದಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆʼʼ ಎಂಬುದಾಗಿ ತಿಳಿಸಿದ್ದಾರೆ.
PM @narendramodi has announced an ex-gratia of Rs. 2 lakh from PMNRF for the next of kin of each deceased in the mishap in the fire accident at Jhansi Medical College in Uttar Pradesh. The injured would be given Rs. 50,000. https://t.co/V8VVQqBb6M
— PMO India (@PMOIndia) November 16, 2024
ಶಾರ್ಟ್ ಸರ್ಕ್ಯೂಟ್ನಿಂದ ಅವಘಡ
ಝಾನ್ಸಿಯ ಮಹಾರಾಣಿ ಲಕ್ಷ್ಮೀ ಭಾಯಿ ವೈದ್ಯಕೀಯ ಕಾಲೇಜಿನ (Maharani Laxmibai Medical College) ಎನ್ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು ಸಜೀವ ದಹನಗೊಂಡಿದ್ದರು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ವಾರ್ಡ್ನಲ್ಲಿ 49ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದು, 37 ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಪೂರ್ತಿಯಾಗಿದ್ದು, ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಶನಿವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್, ಕೇವಲ 18 ಹಾಸಿಗೆಗಳ ಸಾಮರ್ಥ್ಯವಿರುವ ವಾರ್ಡ್ನಲ್ಲಿ ಒಟ್ಟು 49 ಮಕ್ಕಳಿದ್ದರು ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈಗಾಗಲೆ 7 ಮಕ್ಕಳ ಶವಗಳನ್ನು ಗುರುತಿಸಲಾಗಿದ್ದು, ಮೂವರ ಗುರುತು ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಮೃತಪಟ್ಟ ಮಕ್ಕಳ ಮತ್ತು ಅವರ ಕುಟುಂಬ ಸದಸ್ಯರನ್ನು ಗುರುತಿಸಲು ಪ್ರಯತ್ನ ನಡೆಯುತ್ತಿದೆ ಎಂದು ಬ್ರಿಜೇಶ್ ಪಾಠಕ್ ತಿಳಿಸಿದ್ದಾರೆ.
ಇದನ್ನೂ ಓದಿ: Fire Accident: ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ; ಓರ್ವ ರೋಗಿ ಸಾವು
ಪರಿಹಾರ ಘೋಷಣೆ
ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ ಮೃತಪಟ್ಟ ಶಿಶುಗಳ ಪೋಷಕರಿಗೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ ಮತ್ತು ಗಾಯಗೊಂಡ ಶಿಶುಗಳ ಕುಟುಂಬಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದೆ.