ಕ್ಯಾನ್‌ಬೆರಾ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಹೆಲ್ಮೆಟ್‌ಗೆ ಚೆಂಡು ಅಪ್ಪಳಿಸಿದ ಪರಿಣಾಮ ಗಾಯಕ್ಕೆ ತುತ್ತಾಗಿರುವ ಭಾರತದ ಎಡಗೈ ಆಲ್‌ರೌಂಡರ್ ರವೀಂದ್ರ ಜಡೇಜ, ಸರಣಿಯ ಉಳಿದೆರಡು ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ.
ಜಡೇಜ ಅವರ ಸ್ಥಾನಕ್ಕೆ ಬಲಗೈ ವೇಗದ ಬೌಲರ್ ಶಾರ್ದೂಲ್ ಠಾಕೂರ್ ರನ್ನು ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ರವೀಂದ್ರ ಜಡೇಜ ಗಾಯದ ಅಪಾಯಕ್ಕೊಳಗಾಗಿದ್ದರು. ಭಾರತೀಯ ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ಆಸೀಸ್ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಎಸೆದ ಚೆಂಡು ರವೀಂದ್ರ ಜಡೇಜ ಹೆಲ್ಮೆಟ್‌ಗೆ ಬಡಿಯಿತು. ಬಳಿಕ ಕಂಕಷನ್ ನಿಯಮದಲ್ಲಿ ಜಡೇಜ ಬದಲಿಗೆ ಯಜುವೇಂದ್ರ ಚಾಹಲ್ ಕಣಕ್ಕಿಳಿದಿದ್ದರು.
ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದ ಜಡೇಜ 23 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 44 ರನ್ ಗಳಿಸಿ ಅಜೇಯರಾಗುಳಿದರು. ಈ ಮೂಲಕ ತಂಡವನ್ನು ಸ್ಪರ್ಧಾತ್ಮಕ ಮೊತ್ತದತ್ತ ಮುನ್ನಡೆಸಿದರು. ಬಳಿಕ ಬದಲಿ ಆಟಗಾರನಾಗಿ ಕಣಕ್ಕಿಳಿದಿದ್ದ ಯಜುವೇಂದ್ರ ಚಹಲ್ ಮೂರು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಭಾರತದ 11 ರನ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.