Sunday, 1st December 2024

Karnataka weather: ಇಂದು ಬೆಂಗಳೂರು, ಚಾಮರಾಜನಗರ ಸೇರಿ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ

Karnataka weather

ಬೆಂಗಳೂರು: ಫೆಂಗಾಲ್‌ ಚಂಡಮಾರುತ ಪ್ರಭಾವದಿಂದ ತಮಿಳುನಾಡಿನಲ್ಲಿ ಮಾತ್ರವಲ್ಲದೆ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಡಿ.1ರಿಂದ 4ರವರೆಗೆ ಬೆಂಗಳೂರು ಸೇರಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (Karnataka weather) ನೀಡಿದೆ.

ಡಿ.1ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲದೆ ಉಷ್ಣಾಂಶದಲ್ಲಿ 1-2 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ. ಇನ್ನು ಡಿ.2ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಡಿ.3ರಂದು ಆರೆಂಜ್‌ ಅಲರ್ಟ್‌ ಹಾಗೂ ಡಿ.4ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇನ್ನು ಡಿ.2 ರಂದು ದಕ್ಷಿಣ ಒಳನಾಡಿನ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಹಾಸನ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಹಾವೇರಿ, ಗದಗ, ಕೋಪಳ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಡಿ. 3ರಂದು ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆ ಪ್ರತ್ಯೇಕವಾದ ಭಾರಿ ಮಳೆಯಿಂದ ಅತಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಡಿ.4ರಂದು ಕರಾವಳಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ ಎಂದು ಮುನ್ಸೂಚನೆ ನೀಡಿದೆ.

ಈ ಸುದ್ದಿಯನ್ನೂ ಓದಿ | Winter Puffer Jacket Fashion: ಚುಮು ಚುಮು ಚಳಿಯಲ್ಲಿ ಟ್ರೆಂಡಿಯಾದ ವೈವಿಧ್ಯಮಯ ಪಫರ್ ಜಾಕೆಟ್ಸ್!

ಡಿ.2ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 24 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.