Friday, 27th December 2024

Nikhil Kumaraswamy: ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ; ತಂಬಾಕು ಖರೀದಿ ಪ್ರಕ್ರಿಯೆ ಆರಂಭ; ನಿಖಿಲ್ ಕುಮಾರಸ್ವಾಮಿ

Nikhil Kumaraswamy

ನವದೆಹಲಿ: ಮೈಸೂರು ಭಾಗದ ತಂಬಾಕು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರಕ್ಕೆ (Central Government) ಮನವಿ ಸಲ್ಲಿಸಲಾಗಿದ್ದು, ಅದರಂತೆ ತಂಬಾಕು ಖರೀದಿ ಪ್ರಕ್ರಿಯೆ ಶುರುವಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು. ದೆಹಲಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ನಮ್ಮ ನಿಯೋಗದಲ್ಲಿ ಇದ್ದು, ಗೋಯಲ್ ಅವರಿಗೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಆಗುತ್ತಿದೆ ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ಹುಣಸೂರು, ಎಚ್.ಡಿ. ಕೋಟೆ, ಪಿರಿಯಾಪಟ್ಟಣ ಹಾಗೂ ಕೆ.ಆರ್. ನಗರ ಪ್ರದೇಶಗಳಲ್ಲಿ ರೈತರು ತಂಬಾಕು ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗೆಟ್ಟಿದ್ದಾರೆ. ರೈತರ ನೆರವಿಗೆ ಬರಬೇಕು ಎಂದು ಕೇಂದ್ರ ಸರ್ಕಾರದ ಗಮನ ಸೆಳೆಯಲಾಯಿತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಈ ಸುದ್ದಿಯನ್ನೂ ಓದಿ | Karnataka Bank Recruitment 2024: ಕರ್ಣಾಟಕ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

ಕಳೆದ ಒಂದು ವಾರದಿಂದ ನಾನು ದೆಹಲಿಯಲ್ಲಿ ಇದ್ದೇನೆ. ಇಲ್ಲೇನು ನಾನು ಸುಮ್ಮನಿಲ್ಲ. ತಂಬಾಕು ಬೆಳೆಗಾರರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಪ್ರಕೃತಿಯ ವಿಕೋಪದಿಂದ ಒಳ್ಳೆಯ ಬೆಳೆ ಬಂದಿಲ್ಲ. ಗುಣಮಟ್ಟದ ತಂಬಾಕಿಗೆ ಕಂಪನಿಗಳು ಚನ್ನಾಗಿ ಹಣ ನೀಡುತ್ತಿವೆ. ಹೀಗಾಗಿ ಕೇಂದ್ರ ಸಚಿವರಾದ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿ ತಂಬಾಕು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಮಾಡಲಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | Govt Employees: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ; ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಬ್ರೆಜಿಲ್ ಸೇರಿದಂತೆ ಲ್ಯಾಟಿನ್ ಅಮೆರಿಕದ ದೇಶಗಳಲ್ಲಿ ಜನವರಿ ತಿಂಗಳ ವೇಳೆಗೆ ತಂಬಾಕು ಕಟಾವಿಗೆ ಬರಲಿದೆ. ಡಿಸೆಂಬರ್ ಒಳಗಾಗಿ ನಮ್ಮ ರೈತರ ತಂಬಾಕು ಮಾರಾಟ ಆಗಬೇಕಿದೆ. ಇದಕ್ಕೆ ಸಚಿವ ಪಿಯೂಷ್ ಗೋಯಲ್ ಅವರು ಹಾಗೂ ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು.