Tuesday, 24th December 2024

SM Krishna Death: ಇಂದು ಬೆಂಗಳೂರಿನಲ್ಲಿ ಅಂತಿಮ ದರ್ಶನ, ನಾಳೆ ಮದ್ದೂರಿನಲ್ಲಿ ಅಂತ್ಯಕ್ರಿಯೆ

sm krishna death

ಬೆಂಗಳೂರು: ಇಂದು ಮುಂಜಾನೆ ಮೃತಪಟ್ಟ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna Death) ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತದೆ. ಅವರ ಹುಟ್ಟೂರಿನಲ್ಲಿ ನಾಳೆ ಅಂತ್ಯಸಂಸ್ಕಾರ ನೆರವೇರಲಿದೆ.

ಕೃಷ್ಣ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುತ್ತದೆ. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಎಸ್ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿ, ಸಂಬಂಧಿ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ, ಕೇಂದ್ರದ ಮಾಜಿ ಸಚಿವ ಎಸ್ ಎಂ ಕೃಷ್ಣ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಸಿಎಂ ಸಿದ್ದರಾಮಯ್ಯ ಸಂತಾಪ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ (cm siddaramaiah) ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: SM Krishna Death: ವರನಟ ರಾಜ್‌ಕುಮಾರ್‌ ಅಪಹರಣ ಪ್ರಕರಣ ಎದುರಿಸಿದ್ದ ಎಸ್‌ಎಂ ಕೃಷ್ಣ