Friday, 27th December 2024

Panchamasali quota protest: ಸುವರ್ಣಸೌಧ ಮುತ್ತಿಗೆಗೆ ಯತ್ನ; ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌

Panchamasali quota protest

ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಂಡಿದ್ದು, ಆಕ್ರೋಶಗೊಂಡ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮಂಗಳವಾರ ನುಗ್ಗಲು ಯತ್ನಿಸಿದ ಹಿನ್ನೆಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್‌ ನಡೆದಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿಗಾಗಿ ಹೋರಾಟಗಾರರು ಪಟ್ಟು ಹಿಡಿದಿದ್ದು, ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದರಿಂದ ಅವರನ್ನು ತಡೆಯಲು ಪೊಲೀಸರು ಹೈರಾಣಾದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹೀಗಾಗಿ ಹೆದ್ದಾರಿಯಲ್ಲಿ ಪೊಲೀಸರು ಲಾಠಿ ಹಿಡಿದು ನಿಂತಿದ್ದು, ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ.

ಲಾಠಿ ಚಾರ್ಜ್‌ನಿಂದ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ. ಇನ್ನು ಕಲ್ಲು ತೂರಾಟದಿಂದ ಬಸ್‌, ಕಾರು ಹಾಗೂ ಪೊಲೀಸ್‌ ವಾಹನಗಳು ಜಖಂಗೊಂಡಿದ್ದು, ಕೆಲ ಪೊಲೀಸರಿಗೆ ಗಾಯಗಳಾಗಿವೆ ಎನ್ನಲಾಗಿದೆ.

ಸುವರ್ಣ ಸೌಧ ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್‌‌ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಯಕರನ್ನು ವಶಕ್ಕೆ ಪಡೆಯುತ್ತಿದ್ದಂತೆ ಕೆರಳಿದ ಪ್ರತಿಭಟನಾಕಾರರು ಪೊಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಎಡಿಜಿಪಿ ಹಿತೇಂದ್ರ ಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆದಿದೆ.

ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಮಾತನಾಡಿ, ಸಮುದಾಯದ ಶಾಸಕರು, ಸಂಸದರು ನಮ್ಮ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಬೇಕು. ರಾಜ್ಯ ಸರ್ಕಾರ ಅಧಿವೇಶದಲ್ಲೆ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸರ್ಕಾರದಕ್ಕೆ ಎಚ್ಚರಿಕೆ ನೀಡಿದ್ದಾರೆ.

ಲಾಠಿ ಚಾರ್ಜ್‌ ನಡೆಸಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಮಲಗಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದರಿಂದ ಕಿ.ಮೀ.ಗಟ್ಟಲೇ ವಾಹನ ದಟ್ಟಣೆ ಉಂಟಾಗಿದೆ.

ಈ ಸುದ್ದಿಯನ್ನೂ ಓದಿ | Lalu Prasad Yadav: ಮಹಿಳೆಯರನ್ನು ನೋಡೋಕೆ ನಿತೀಶ್‌ ಯಾತ್ರೆ-ನಾಲಿಗೆ ಹರಿಬಿಟ್ಟ ಲಾಲೂ