ಬೆಳಗಾವಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ (PDO) ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.
ಈ ಸುದ್ದಿಯನ್ನೂ ಓದಿ | Job Guide: ರಾಷ್ಟ್ರೀಯ ಕೆಮಿಕಲ್ & ಫರ್ಟಿಲೈಸರ್ಸ್ ಲಿಮಿಟೆಡ್ನಲ್ಲಿದೆ 378 ಹುದ್ದೆ; ಇಂದೇ ಅಪ್ಲೈ ಮಾಡಿ
ವಿಧಾನ ಪರಿಷತ್ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ.
ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.