Monday, 16th December 2024

CBSE Syllabus: ರಾಜ್ಯ ಪಠ್ಯಕ್ರಮದ 6-10ನೇ ತರಗತಿಗಳಿಗೆ ಗಣಿತ, ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಸಿಲಬಸ್ ಅಳವಡಿಕೆ

CBSE Syllabus

ಬೆಳಗಾವಿ: ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (CBSE Syllabus) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ. ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ ಈವರೆಗೆ 1 ರಿಂದ 8ನೇ ತರಗತಿಯವರೆಗೆ ಮಕ್ಕಳ ಶಾಲಾ ಪ್ರವೇಶ ಶುಲ್ಕವನ್ನು ಸರ್ಕಾರವೇ ಭರಿಸುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ನೀಡಿದ್ದಾರೆ.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲಕುಮಾರ ಅವರು, ಆರ್‌ಟಿಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲ ವಾಗಲಿದೆ. ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಚಿಂತನೆ ಹೊಂದಿದೆಯೇ? ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಪ್ರಶ್ನಿಸಿದರು. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನೂ ಓದಿ | Job Guide: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಇಲ್ಲಿದೆ 39 ಮ್ಯಾನೇಜರ್, ಸೂಪರ್ ವೈಸರ್ ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ (BBMP) ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar), ಈ ವಿಧೇಯಕವನ್ನು ಮಂಡಿಸಿದರು.

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸದವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿಸಲು ನವೆಂಬರ್ 30 ವರೆಗೂ ಕಾಲಾವಕಾಶ ನೀಡಲಾಗಿತ್ತು. ಈ ಮೂಲಕ ಪಾಲಿಕೆಗೆ 700 ಕೋಟಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. 3 ಲಕ್ಷ ಆಸ್ತಿಗಳಿಂದ 1200 ಕೋಟಿ ಬಾಕಿ ವಸೂಲಿ ಮಾಡಲಾಗಿದೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ ಎಂದು ಅವರು ಮಾಹಿತಿ ನೀಡಿದರು.

2024 ರ ನವೆಂಬರ್ 30 ರವರೆಗೆ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈ ಸಂಬಂಧ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಿದ್ದು, ಈಗ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ಉಪ ಮುಖ್ಯಮಂತ್ರಿಗಳು ಉತ್ತಮ ತಿದ್ದುಪಡಿ ವಿಧೇಯಕ ಮಂಡಿಸಿದ್ದು, ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿದ್ದಾರೆ. ಇದುವರೆಗೂ ತೆರಿಗೆ ಪಾವತಿಸದವರು ಕೂಡ ತೆರಿಗೆ ಪಾವತಿಸುವಂತೆ ಮಾಡಲಾಗಿದೆ. ತೆರಿಗೆ ವಂಚನೆ ಮಾಡುವವರು, ಕಡಿಮೆ ಆಸ್ತಿ ಮೌಲ್ಯ ಘೋಷಣೆ ಮಾಡಿಕೊಳ್ಳುವವರನ್ನು ತೆರಿಗೆ ವ್ಯಾಪ್ತಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಆಸ್ತಿ ತೆರಿಗೆ ಹೆಚ್ಚಿಸಬೇಡಿ. ಆಸ್ತಿ ತೆರಿಗೆದಾರರ ಮೇಲೆ ಹೆಚ್ಚಿನ ಭಾರ ಹೊರಿಸಬೇಡಿ. ಪಾಲಿಕೆಯನ್ನು ಆಸ್ತಿ ತೆರಿಗೆ ಹಣದಲ್ಲೇ ನಡೆಸಲು ಮುಂದಾಗಬೇಡಿ. ರಾಜ್ಯದಲ್ಲಿ 65% ತೆರಿಗೆ ಸಂಗ್ರಹವಾಗುತ್ತಿದ್ದು, ಈ ನಗರಕ್ಕೆ ಬೇರೆ ಇಲಾಖೆಗಳಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರದಿಂದ ಬರುವ ಅನುದಾನ ಹೆಚ್ಚಾಗಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರನ್ನು ತೆರಿಗೆ ವ್ಯಾಪ್ತಿಗೆ ತರುವ ನಿಮ್ಮ ಪ್ರಯತ್ನಕ್ಕೆ ಶುಭಾಶಯ ತಿಳಿಸುತ್ತೇನೆ” ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Winter Headband Fashion: ವಿಂಟರ್ ಹೇರ್ ಸ್ಟೈಲ್ ವಿನ್ಯಾಸಕ್ಕೆ ಬಂತು ಆಕರ್ಷಕ ಹೆಡ್ ಬ್ಯಾಂಡ್ಸ್!

ನಂತರ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದರು. ಸದನದಲ್ಲಿ ಸರ್ವಾನುಮತದಿಂದ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.