ತುಮಕೂರು: ತಾಲೂಕಿನ ಮೈದಾಳದ ಬಿಸಿಎಂ ಲೇಡೀಸ್ ಹಾಸ್ಟೆಲ್‌ಗೆ (2443) ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ಅವ್ಯವಸ್ಥೆಯಿಂದ ವಿದ್ಯಾರ್ಥಿನಿಯರು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ವಿಶ್ವವಾಣಿ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ್ದ ಜಿಲ್ಲಾಧಿಕಾರಿಗಳು, ವಾರ್ಡನ್ ಸೇರಿ 12 ಮಂದಿ ಸಿಬ್ಬಂದಿ ವರ್ಗಾವಣೆಗೆ ಆದೇಶ ನೀಡಿದ್ದರು. ಇದರ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಹಾಸ್ಟೆಲ್‌ನಲ್ಲಿ ಮೂಲಸೌಕರ್ಯಗಳಿಲ್ಲದೆ ವಿದ್ಯಾರ್ಥಿನಿಯರು ತೊಂದರೆ ಅನುಭವಿಸುತ್ತಿದ್ದರೂ ವಾರ್ಡನ್ ಸೇರಿ ಇತರೆ ಯಾವುದೇ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ವಿಶ್ವವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಪರಿಣಾಮವಾಗಿ ವಿದ್ಯಾರ್ಥಿನಿಯರು ಕಳೆದ ಗುರುವಾರ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿ, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದರು.
ಹಾಸ್ಟೆಲ್ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ, ವಿದ್ಯಾರ್ಥಿನಿಯರು ಸಮಸ್ಯೆ ಬಗೆಹರಿಸುವಂತೆ ಬಿಸಿಎಂ ಅಧಿಕಾರಿಗೆ ಸೂಚಿಸಿದ್ದರು. ಪರಿಣಾಮಕಾರಿಯಾಗಿ 12 ಮಂದಿ ಹಾಸ್ಟೆಲ್ ಸಿಬ್ಬಂದಿ ವರ್ಗಾವಣೆ ಮಾಡಲಾಗಿತ್ತು.
ಇನ್ನು ಹಾಸ್ಟೆಲ್‌ನಲ್ಲಿ ಅನೇಕ ಸಮಸ್ಯೆಗಳಿದ್ದರೂ ಅಧಿಕಾರಿಗಳು ಸರ್ಕಾರದ ಸವಲತ್ತುಗಳನ್ನು ವಿದ್ಯಾರ್ಥಿನಿಯರಿಗೆ ತಲುಪಿಸದೆ ಅಕ್ರಮವೆಸಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಯುಕ್ತರು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಿದ್ಯಾರ್ಥಿನಿಯರು ಪತ್ರ ಬರೆದು ಒತ್ತಾಯಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಹಾಸ್ಟೆಲ್ ಸಮಸ್ಯೆಗಳ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡು, ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ನಂತರ ಲೋಕಾಯುಕ್ತ ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಈ ಸುದ್ದಿಯನ್ನೂ ಓದಿ | CM Siddaramaiah: ಆಲಮಟ್ಟಿ ಡ್ಯಾಂ ಎತ್ತರ 524.26 ಮೀ.ಗೆ ಹೆಚ್ಚಳ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಬದ್ಧ: ಸಿಎಂ
ಈ ವೇಳೆ ಹಾಸ್ಟೆಲ್‌ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಸೂಕ್ತ ತನಿಖೆಯಾಗಿ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕೆಂದು ನೂರಾರು ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ.