Thursday, 19th December 2024

Job news: ಸಿಹಿ ಸುದ್ದಿ, ಸಾರಿಗೆ ನಿಗಮಗಳಲ್ಲಿ 9000 ಸಿಬ್ಬಂದಿ ನೇಮಕಾತಿಗೆ ಚಾಲನೆ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ (job news) ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸಿದ್ದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ ಬಸ್ ಗಳನ್ನು ಖರೀದಿಸಲಾಗುವುದು. ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4,000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.