ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂಬ ಆರೋಪ ಹೊತ್ತಿರುವ ಸಿಟಿ ರವಿ (CT Ravi) ಅವರನ್ನು ವಿಧಾನ ಪರಿಷತ್ ಸದಸ್ಯತ್ವ ಸ್ಥಾನದಿಂದ ವಜಾ ಗೊಳಿಸಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಶನಿವಾರ ಬೆಳಗಾವಿಯಲ್ಲಿ (Belagavi News) ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಪ್ರತಿಭಟನಾ ಮೆರವಣಿಗೆ ನಡೆಸಿ, ಸಿ.ಟಿ. ರವಿ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿಟಿ ರವಿ ಅವರ ಪ್ರತಿಕೃತಿ ರಚಿಸಿ, ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಿಟಿ ರವಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಒಂದು ಕ್ಷಣವೂ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯುವ ಹಕ್ಕು ಸಿ.ಟಿ. ರವಿಗೆ ಇಲ್ಲ. ಅಂತವರನ್ನು ಬಿಜೆಪಿ ತಕ್ಷಣ ಹೊರಹಾಕಬೇಕು ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Drone Training: ಡ್ರೋನ್ ತರಬೇತಿಗೆ ಅರ್ಜಿ ಆಹ್ವಾನ; ಡಿ.23 ಕೊನೆ ದಿನ
ಸಿ.ಟಿ. ರವಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಷ್ಟೇ ಅಲ್ಲ. ಇಡೀ ಸ್ತ್ರೀಕುಲಕ್ಕೆ ಅಪಮಾನ ಮಾಡಿದ್ದಾರೆ. ಸಿ.ಟಿ.ರವಿ ಕ್ಷಮೆಯಾಚಿಸಬೇಕು, ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಬೇಕು ಎಂದು ಅಭಿಮಾನಿಗಳು ಆಗ್ರಹಿಸಿದರು. ಬಳಿಕ ಪ್ರತಿಭಟನಾಕಾರರು ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.