Thursday, 19th September 2024

ರೈತರ ಪ್ರತಿಭಟನೆ ನಡುವಲ್ಲೇ ನಾಳೆ ಪ್ರಧಾನಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ.

ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು  ಬಂದಿದೆ. ಡಿ.9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾ ಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ.

ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆದಿದ್ದು 20ನೇ ದಿನಕ್ಕೆ ಕಾಲಿಟ್ಟಿದೆ. ಒಂದು ವೇಳೆ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಪ್ರತಿನಿಧಿಗಳ‌ ನಡುವೆ ಈವರೆಗೆ 5 ಸಭೆಗಳು ನಡೆದಿವೆ.