Tuesday, 24th December 2024

Transfer Guidelines: ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಅನುಮತಿ ಕಡ್ಡಾಯ; ರಾಜ್ಯ ಸರ್ಕಾರ ಮಹತ್ವದ ಆದೇಶ

Transfer Guidelines

ಬೆಂಗಳೂರು: ನನ್ನ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ (Transfer Guidelines) ಆದೇಶ ಹೊರಡಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಬೆಳಗಾವಿ ಅಧಿವೇಶನದಲ್ಲಿ ಸೂಚಿಸಿದ್ದರು. ಇದೀಗ ವರ್ಗಾವಣೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಟಿಪ್ಪಣೆ ಹೊರಡಿಸಿದ್ದರು. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವೀರಭದ್ರ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಜೂನ್ 25ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಅದರಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ. ಇನ್ನು ವಿಶೇಷವಾದ ಅಥವಾ ಅಪವಾದಾತ್ಮಕ ಕಾರಣಗಳ ಮೇರೆಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ, ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕವೆನಿಸಿದ್ದಲ್ಲಿ ಕಡ್ಡಾಯವಾಗಿ ಮುಖ್ಯಮಂತ್ರಿ ಅವರ ಅನುಮೋದನೆ ಪಡೆದು ವರ್ಗಾವಣೆ ಮಾಡಬೇಕು.

2024-25ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಜೂನ್‌ 25ರಿಂದ ಜುಲೈ 31ವರೆಗೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟು ಮೀರದೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿತ್ತು. ಅಂದರೆ, ಜುಲೈ 31ರಂದು 2024ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿಯು ಮುಕ್ತಾಯಗೊಂಡಿರುತ್ತದೆ. ಆದರೆ ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸುತ್ತಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ.

ಈಗಾಗಲೇ ಸಾರ್ವತ್ರಿಕ ವರ್ಗಾವಣಾ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿ ಅವರ ಪೂರ್ವಾನುಮೋದನೆಯನ್ನು ಪಡೆಯಬೇಕು. ಒಂದು ವೇಳೆ ಪೂರ್ವಾನುಮೋದನೆಯನ್ನು ಪಡೆಯದೇ ಯಾವುದೇ ವರ್ಗಾವಣೆಗಳನ್ನು ಮಾಡಿದಲ್ಲಿ / ವರ್ಗಾವಣೆ ಮಾಡಿ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿ ಅವರಿಗೆ ಕಡತದಲ್ಲಿ ಸಲ್ಲಿಸಿದ್ದಲ್ಲಿ ಸಂಬಂಧಪಟ್ಟ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರನ್ನು ನೇರ ಜವಾಬ್ದಾರರನ್ನಾಗಿಸಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | V Somanna: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಬಗ್ಗೆ ಕೇಂದ್ರಕ್ಕೆ ಪತ್ರ: ವಿ.ಸೋಮಣ್ಣ