Wednesday, 25th December 2024

DK Shivakumar: ಬಿಜೆಪಿಯ ಬೆಳಗಾವಿ ಚಲೋ; ಡಿ.ಕೆ. ಶಿವಕುಮಾರ್ ಏನಂದ್ರು?

DK Shivakumar

ಬೆಳಗಾವಿ: ಕಾಂಗ್ರೆಸ್ ಪಕ್ಷದ (Congress Party) ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್‌ನಲ್ಲಿ ಮಾಧ್ಯಮಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು.

ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಕೇಳಿದಾಗ, ಈಗ ಆ ಮಾತು ಏಕೆ. ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Consumer Rights day 2024: ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ: ಜಾಗೃತಿಯೇ ರಕ್ಷಾ ಕವಚ

ಬೆಳಗಾವಿ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದ್ದು, ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ಅವರು ಹೇಳಿದರು.

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ಇಂದು ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಕಾರ್ಯಕ್ರಮ ನಡೆಯುವ ಜಾಗಗಳಿಗೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡುತ್ತಿದ್ದೇನೆ. ಮಂಗಳವಾರ (ಇಂದು) ಎಲ್ಲಾ ಸಿದ್ಧತೆ ಪೂರ್ಣಗೊಳ್ಳಲಿದೆ ಎಂದರು.

ಈ ಸುದ್ದಿಯನ್ನೂ ಓದಿ | Karnataka Film Chamber of Commerce: ಸಿಎಂ ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಪದಾಧಿಕಾರಿಗಳು

ಕಾರ್ಯಕ್ರಮಗಳ ವಿವರದ ಬಗ್ಗೆ ಕೇಳಿದಾಗ, ʼ26 ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26 ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27 ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆʼ ಎಂದು ತಿಳಿಸಿದರು.