ತುಮಕೂರು: ಕಲ್ಪತರುನಾಡಿನಲ್ಲಿ ವೈಕುಂಠ ಏಕಾದಶಿಯನ್ನು (Vaikunta Ekadasi) ಸಡಗರ ಸಂಭ್ರದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ವಿವಿಧ ಬಡಾವಣೆಗಳ ಹಾಗೂ ಜಿಲ್ಲೆಯ ವಿವಿಧೆಡೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ನಗರದ ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾಲಯ, ಸಿರಾ ಗೇಟ್ ಸಮೀಪವಿರುವ ಶ್ರೀ ವೆಂಕಟೇಶ್ವಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರದ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರ ಪಶ್ಚಿಮದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷ್ಮಿ
ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶುಕ್ರವಾರ ಮುಂಜಾನೆಯಿದಲೇ ಭಕ್ತರು ವೆಂಕಟೇಶ್ವರ ಸ್ವಾಮಿ ದೇವಾಲಯಗಳಿಗೆ ತೆರಳಿ ಸರದಿ ಸಾಲಿನಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಸಿರಾಗೇಟ್ ಸಮೀಪದ ವೆಂಕಟೇಶಪುರದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಕಾರೋತ್ಸವಗಳು ನೆರವೇರಿದವು. ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಹಾಗೆಯೇ ದೇವರ ಮೂರ್ತಿಗಳಿಗೂ ವೈಭವೋಪೇತ ಅಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು.
ಈ ಸುದ್ದಿಯನ್ನೂ ಓದಿ | Vaikunta Ekadashi: ಪವಿತ್ರ ವೈಕುಂಠ ಏಕಾದಶಿ, ನಾಡಿನೆಲ್ಲೆಡೆ ದೇವಾಲಯಗಳಲ್ಲಿ ಭಕ್ತಾದಿಗಳ ಸಾಗರ
ಈ ಎಲ್ಲ ದೇವಾಲಯಗಳಲ್ಲೂ ಭಕ್ತಾದಿಗಳಿಗೆ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ನಗರದ ವಿವಿಧ ಬಡಾವಣೆಗಳಲ್ಲಿರುವ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾದಿಗಳು ನೆರವೇರಿದ್ದು, ಭಕ್ತರಿಗೆ ವೈಕುಂಠ ಏಕಾದಶಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.