Saturday, 23rd November 2024

ಮೋದಿ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಲು ’ಕೈ’ ಪ್ಲಾನ್

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ.17 ಅನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ಕಾರ್ಯಕರ್ತರು ಸಜ್ಜುಗೊಂಡಿ ದ್ದು, ದೇಶಾದ್ಯಂತ ಬೃಹತ್‌ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದಾರೆ.

ಆದರೆ, ಅದೇ ದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಲು ಯುವ ಕಾಂಗ್ರೆಸ್ ನಿರ್ಧರಿಸಿದೆ. ಮೋದಿ ಅವರ ಆಡಳಿತದಲ್ಲಿ ಯುವಕರು ಉದ್ಯೋಗವಿಲ್ಲದೆ ಬೀದಿಪಾಲಾಗಿದ್ದು, ಯಾವುದೇ ಪ್ರಯೋಜನ ವಾಗಿಲ್ಲ ಎಂದು ಆರೋಪಿಸಿದ್ದಾರೆ.

ಮೋದಿ ಜನ್ಮದಿನವಾದ ಸೆ.17 ರಂದು ದೇಶಾದ್ಯಂತ ವಿವಿಧ ಪ್ರತಿಭಟನೆಗಳನ್ನು ನಡೆಸಲು ನಿರ್ಣಯಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಏಳೂವರೆ ವರ್ಷದ ಆಡಳಿತದಲ್ಲಿ ನಿರುದ್ಯೋಗಿಗಳಿಗೆ ಅನುಕೂಲ ವಾಗುವಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ಉದ್ಯೋಗ ಭರ್ತಿಗೂ ಕ್ರಮ ಕೈಗೊಂಡಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಆರೋಪಿಸಿದ್ದಾರೆ.

ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಮೋದಿ ಹೇಳಿದ್ದನ್ನು ನೆನಪಿಸಿದ್ದಾರೆ. ಉದ್ಯೋಗವಿಲ್ಲದೆ ಯುವಕರು ರಸ್ತೆಗಳಲ್ಲಿ ತಿರುಗಾಡುತ್ತಿದ್ದರೆ, ಕೇಂದ್ರ ಮಾತ್ರ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಒಂದೇ ವರ್ಷದಲ್ಲಿ ನಿರುದ್ಯೋಗ ಪ್ರಮಾಣ ಶೇ 2.4 ರಿಂದ 10.3 ಕ್ಕೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.