ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.17ರವರೆಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆ ಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಹಾಗೂ ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಈಗಾಗಲೇ 150 ಮಿಮೀ ಮಳೆ ದಾಖಲಿಸುವ ಮೂಲಕ ತಿಂಗಳ ಸಾಮಾನ್ಯ ಮಟ್ಟವನ್ನು ತಲುಪಿದೆ. ಇನ್ನು ಮುಂದಿನ ನಾಲ್ಕು ದಿನಗಳ ಕಾಲ ಮಿಂಚು ಹೆಚ್ಚಾಗಿರಲಿದ್ದು, ಚಂಡಮಾರುತದ ಚಟುವಟಿಕೆ ಇರುವುದರಿಂದ ಗಾಳಿ ಹೆಚ್ಚಿರುತ್ತದೆ.
ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ಗಂಗಾ ಪಶ್ಚಿಮ ಬಂಗಾಳದಲ್ಲಿ ಸಾಧಾರಣ ಮಳೆ ಯಾಗಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಆಂಧ್ರಪ್ರದೇಶದ ಕರಾವಳಿ, ತಮಿಳುನಾಡಿನ ಉಳಿದ ಭಾಗಗಳು, ಕರ್ನಾಟಕ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ದಕ್ಷಿಣ ಗುಜರಾತ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಿದೆ.
ಕಳೆದ ಕೆಲ ದಿನಗಳಿಂದ ಮಲೆನಾಡಲ್ಲಿ ಉತ್ತಮ ಮಳೆಯಾದ ಪರಿಣಾಮ ತುಂಗಭದ್ರಾ ಜಲಾಶಯದಿಂದ 45 ಸಾವಿರ ಕ್ಯುಸೆಕ್ ನೀರು ಹೊರಗೆ ಬಿಡಲಾಗು ತ್ತಿದೆ.
ಮಂಡ್ಯ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದ್ದು, ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಮಂಡ್ಯ, ಭಾರತೀನಗರ, ಮದ್ದೂರು, ನಾಗಮಂಗಲ ತಾಲೂಕಿನಲ್ಲಿ ಕೆಲಗಂಟೆಗಳ ಕಾಲ ಭರ್ಜರಿ ಮಳೆಯಾಗಿದ್ದರೆ, ಶ್ರೀರಂಗಪಟ್ಟಣದಲ್ಲಿ ಸಾಧಾರಣ ಮಳೆಯಾಗಿದೆ.