ಕಳೆದ ಸೆಪ್ಟೆಂಬರ್‌ನಿಂದ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕ ರೈತರ ಬೆಳೆಗಳು ಮಣ್ಣುಪಾಲಾಗಿವೆ. ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ.
ಮಳೆಯಿಂದಾಗಿ ಕೊಯಿಲಿಗೆ ಬಂದ ಬೆಳೆಗಳು ಹೊಲ ಗದ್ದೆಗಳಲ್ಲೇ ಕೊಳೆತು ಹೋಗುವಂತಾಗಿದೆ. ವಾಡಿಕೆ ಯಂತೆ ರಾಜ್ಯದಲ್ಲಿ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ, 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ. ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾದ ಮಳೆ ಇನ್ನೂ ನಿಂತಿಲ್ಲ.
ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಗಳಲ್ಲಿ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ. ಆನಂತರ ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆ ಕಾರಣದಿಂದ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ.
ಕೊಳೆ ರೋಗದ ಜತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆ ಎದುರಿಸು ತ್ತಿದೆ. ಆದ್ದರಿಂದ ರಾಜ್ಯ ಸರಕಾರ ತಕ್ಷಣ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ, ಪರಿಹಾರ ನೀಡುವ ಮೂಲಕ ರೈತರ ನೆರವಿಗೆ ಧಾವಿಸಬೇಕಿದೆ. ಕೇಂದ್ರ ಸರಕಾರವೂ ರಾಜ್ಯದಿಂದ ಮಳೆ ಹಾನಿಯ ವರದಿ ತರಿಸಿಕೊಂಡು ಸೂಕ್ತ ಪರಿಹಾರ ನೀಡಬೇಕಿದೆ.