Friday, 22nd November 2024

ಮೃತರ ದಾಖಲೆಯಿಲ್ಲ, ಹೀಗಾಗಿ ಪರಿಹಾರದ ಪ್ರಶ್ನೆಯೇ ಇಲ್ಲ: ಸಚಿವ ತೋಮರ್‌

ನವದೆಹಲಿ : ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮೃತಪಟ್ಟಿರುವವರ ಕುರಿತು ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲದ ಕಾರಣ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಸಂಸತ್‌ನಲ್ಲಿ ಹೇಳಿದ್ದಾರೆ.

ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದ್ದವು. ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿ ದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.

ರೈತರ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳನ್ನು ಹಿಂಪಡೆಯುವ ಮಸೂದೆ ಅಂಗೀಕಾರಕ್ಕೆ ಕೇಂದ್ರ ಸರ್ಕಾರ ಮುಂದಾಯಿತು.