Friday, 20th September 2024

ಲಖಿಂಪುರ್ ಖೇರಿ ಹಿಂಸಾಚಾರದ ಎಸ್‌ಐಟಿ ವರದಿಗೆ ಗದ್ದಲ: ಕಲಾಪ ಮುಂದೂಡಿಕೆ

Loksabhe session

ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್‌ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದಲ್ಲಿ ಆರೋಪಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುಂತೆ ವಿರೋಧ ಪಕ್ಷದ ನಾಯಕರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧ ಪಕ್ಷದ ನಾಯಕರು ಅಜಯ್ ಮಿಶ್ರಾ ಅವರನ್ನು ವಜಾಗೊಳಿಸು ವಂತೆ ಆಗ್ರಹಿಸಿ, ಸರ್ಕಾರದ ವಿರುದ್ಧ ಘೋಷಣಾ ವಾಕ್ಯಗಳನ್ನು ಕೂಗಿ ಪ್ರತಿಭಟನೆ ನಡೆಸಲು ಆರಂಭಿಸಿದರು.

ಸ್ಪೀಕರ್ ಓಂ ಬಿರ್ಲಾ ಅವರು, ಪ್ರಶ್ನೋತ್ತರ ಅವಧಿ ನಡೆಸಲು ಅನುವು ಮಾಡಿಕೊಡುವಂತೆ ಮನವಿ ಮಾಡಿಕೊಂಡರು. ಪ್ರಶ್ನೋತ್ತರ ಅವಧಿ ನಡೆಸಲು ಅನುವು ಮಾಡಿಕೊಡದ ಪ್ರತಿಭಟನೆ ನಡೆಸುವುದು ಉತ್ತಮ ನಡವಳಿಕೆಯಲ್ಲ ಎಂದು ಹೇಳಿದರು. ಹಲವು ಮನವಿಗಳ ಬಳಿಕವೂ ವಿಪಕ್ಷ ನಾಯಕರು ಕೇಳದೆ ಪ್ರತಿಭಟನೆ ನಡೆಸಿ ಗದ್ದಲವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಈ ನಡುವೆ 12 ಸದಸ್ಯರ ಅಮಾನತುಗೊಳಿಸಿದ ಕುರಿತು ವಿರೋಧ ಪಕ್ಷಗಳ ನಾಯಕರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪ ವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿತ್ತು.