Saturday, 23rd November 2024

ವಿದ್ಯಾರ್ಥಿಗಳ ರಕ್ಷಣೆಗೆ ’ಭಾರತೀಯ ರಾಯಭಾರಿ’ಗಳ ರವಾನೆ

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 5ನೇ ದಿನಕ್ಕೆ ಕಾಲಿಟ್ಟಿದೆ. ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಇದೀಗ ಕೇಂದ್ರ ಸಚಿವರ ತಂಡ ಉಕ್ರೇನ್ ನ ನೆರೆರಾಷ್ಟ್ರಗಳಿಗೆ ತೆರಳಿದೆ.

ಕೇಂದ್ರ ಸಚಿವರಾದ ಹರ್ದೀಪ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಆರ್‌ಕೆ ಸಿಂಗ್ ಅವರು ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಮತ್ತು ಸಹಾಯ ಮಾಡಲು ನೆರೆಯ ದೇಶಗಳಿಗೆ ತೆರಳಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಖಾತ್ರಿಪಡಿಸುವುದು ಮತ್ತು ಅವರನ್ನು ಸ್ಥಳಾಂತರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರತಿಪಾದಿಸಿದ್ದರು.