Sunday, 24th November 2024

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್…!

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದೂವರೆ ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಮೂರು ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ಆರಂಭಿಸಿದ್ದ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತ್ತು.

ಎಲ್ಲ ಅರ್ಜಿಗಳನ್ನು ಒಗ್ಗೂಡಿಸಿ ಸುಪ್ರೀಂಕೋರ್ಟ್ ವಿಚಾರಣೆ ಆರಂಭಿಸಿದ್ದರೂ ತಾಂತ್ರಿಕ ಕಾರಣಗಳಿಂದ ವಿಚಾರಣೆ ಹಲವಾರು ಬಾರಿ ಮುಂದೂಡ ಲ್ಪಟ್ಟಿತ್ತು.

ಬಿಬಿಎಂಪಿ ಚುನಾವಣೆ ವಿಚಾರವನ್ನು ಶುಕ್ರವಾರ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಹಾಗೂ ಜೆ.ಬಿ.ಪರ್ದಿವಾಲಾ ಅವರನ್ನೊಳ ಗೊಂಡ ವಿಭಾಗೀಯ ಪೀಠ ಎಂಟು ವಾರದೊಳಗೆ ವಾರ್ಡ್ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕರ್ನಾಟಕ ಮುನ್ಸಿಪಲ್ ಕಾಪೆರ್ರೇಷನ್ ತಿದ್ದುಪಡಿ ಕಾಯ್ದೆಯನುಸಾರ ರಾಜ್ಯ ಸರ್ಕಾರ ವಾರ್ಡ್ ಪುನರ್ವಿಂಗಡ ಣೆಗಾಗಿ ರಚಿಸಲಾಗಿರುವ ಭಕ್ತವತ್ಸಲಂ ನೇತೃತ್ವದ ಆಯೋಗ ಎಲ್ಲ ಡಿ ಲಿಮಿಟೇಷನ್ ಪ್ರಕ್ರಿಯೆಗಳನ್ನೂ ಎಂಟು ವಾರದೊಳಗೆ ಪೂರ್ಣಗೊಳಿಸಬೇಕು ಹಾಗೂ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಬೇಕು ಎಂದು ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿರುವುದರಿಂದ ಬಿಬಿಎಂಪಿಗೆ ಸೆಪ್ಟೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಸುಪ್ರೀಂಕೋರ್ಟ್, ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.

ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಟ್ವಿಟ್ ಮಾಡಿರುವ ಕಂದಾಯ ಸಚಿವ ಆರ್.ಅಶೋಕ್ ಅವರು ಚುನಾವಣೆ ನಡೆಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದಿದ್ದಾರೆ.