ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಮಾಸದ ನಾಲ್ಕು ಶುಕ್ರವಾರಗಳು (ಜುಲೈ 1,8,15,22) ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆ ದಿನಗಳಂದು ಸರ್ಕಾರಿ ಬಸ್‌ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.
ಲಲಿತ್ ಮಹಲ್ ಪಕ್ಕದಲ್ಲಿರುವ 18 ಎಕರೆ ಪ್ರದೇಶದಿಂದ ಬಸ್ ಗಳು ಸಂಚರಿಸಲಿವೆ. ಭಕ್ತರ ಅನುಕೂಲಕ್ಕಾಗಿ 50 ಬಸ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಮೈಸೂರು ನಗರದ ನಾನಾ ಭಾಗಗಳಿಂದ ಕೂಡ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಬೆಟ್ಟಕ್ಕೆ ಆಗಮಿಸುವವರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಅಥವಾ 72 ಗಂಟೆಗಳ ಮುಂಚಿನ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಬಸ್ ನಿಲ್ದಾಣ, ಪಾರ್ಕಿಂಗ್ ಸ್ಥಳ ಸೇರಿದಂತೆ ನಾನಾ ಕಡೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ವರದಿ ಪರಿಶೀಲಿಸಲಿದ್ದಾರೆ ಎಂದರು.
ಬೆಳಗ್ಗೆ 5.30 ರಿಂದ ರಾತ್ರಿ 8.30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಮಳೆ ಹಿನ್ನೆಲೆಯಲ್ಲಿ ಪೆಂಡಾಲ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಬೆಟ್ಟದ ಮೇಲ್ಭಾಗದಲ್ಲಿ ದಾನಿಗಳಿಂದ ಊಟದ ವ್ಯವಸ್ಥೆ ಇರಲಿದೆ. ಸ್ವಚ್ಛತೆ ಕಾಪಾಡಲು ಪೌರಕಾರ್ಮಿಕರನ್ನು ನಿಯೋಜಿಸು ವಂತೆ ಸೂಚಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ಬೆಟ್ಟದ ಸುತ್ತಮುತ್ತ ಸಿಸಿಟಿವಿ ಅಳವಡಿಸಲಾಗುವುದು. ಅಧಿಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.