Friday, 18th October 2024

ಸೋನಿಯಾ ಗಾಂಧಿ ವಿಚಾರಣೆ: ಕೈ ಕಾರ್ಯಕರ್ತರ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗೆ ಹಾಜರಾಗುವ ಹಿನ್ನೆಲೆಯಲ್ಲಿ, ದೆಹಲಿ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆಗಳು ನಡೆಸಿದ್ದಾರೆ.

ಸಂಸತ್‍ನ ಉಭಯ ಸದನಗಳ ಒಳಗೆ ಮತ್ತು ಹೊರಗೆ ಬೃಹತ್ ಪ್ರತಿಭಟನೆಗಳು ನಡೆದಿದ್ದು, ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿವೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮೂರನೇ ಬಾರಿ ನೋಟಿಸ್ ನೀಡಿತ್ತು.

ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗ  ಪಡಿಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನೋಟಿಸ್ ನೀಡಿ, ತನಿಖಾ ಸಂಸ್ಥೆಗಳ ದುರುಪ ಯೋಗದ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದವು. ಆದರೆ ಅವಕಾಶ ಸಿಗದೆ ಇದ್ದಾಗ ಗದ್ದಲ ನಡೆಸಿದ್ದು, ಅಧಿವೇಶನವನ್ನು ಕೆಲ ಕಾಲ ಮುಂದೂಡಲಾಗಿದೆ.

ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡು ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಿಂದ ದೆಹಲಿಯಲ್ಲಿ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರತಿಭಟನಾಕಾರರನ್ನು ತಡೆಯಲೆತ್ತಿಸಿದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟನೂಕಾಟ ನಡೆಸಿದೆ. ಅಲ್ಲಲ್ಲಿ ಬ್ಯಾರಿಕೇಡ್ ಹಾಕಿ ಕಾರ್ಯಕರ್ತರನ್ನು ನಿಗ್ರಹಿಸಲು ಪೊಲೀಸರು ಯತ್ನಿಸಿದ್ದಾರೆ.

ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷಗಳ ನಾಯಕರು, ಹಿರಿಯ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ನಾಳೆ ಜಿಲ್ಲಾ ಮಟ್ಟಗಳಲ್ಲಿ ಪ್ರತಿಭಟನೆ ನಡೆಯಲಿದೆ.