ವಿಶ್ವವಾಣಿ ಸುದ್ದಿಮನೆ ಬೆಂಗಳೂರು
ಆರ್ಥಿಕ ಸಮಸ್ಯೆೆ ಇದ್ದಾಗ್ಯೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸದಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಂಗಳವಾರದಂದು ಬಿಎಸ್‌ವೈ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ 2019-20ನೇ ಸಾಲಿನಲ್ಲಿ ಶೇ. 97 ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ
ಅಭ್ಯರ್ಥಿಗಳಲ್ಲಿ ಇಬ್ಬರು ಐಎಎಸ್, ಇಬ್ಬರು ಐಪಿಎಸ್, 13 ಅಭ್ಯರ್ಥಿಗಳು ಐಆರ್‌ಎಸ್ ಸೇವೆಗೆ ಆಯ್ಕೆಯಾಗಿರುವುದು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸೇವೆಗಳಿಗೆ ಸೇರ್ಪಡೆಯಾಗಿರುವ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗಂಗಾರಾಮ್ ಬಡೇರಿಯ ಮತ್ತು ಸರಕಾರದ ಇತರ ಹಿರಿಯ ಅಧಿಕಾರಿಗಳು ಇದ್ದರು.