ನವದೆಹಲಿ: ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
ನ್ಯಾ.ಹೇಮಂತ್ ಗುಪ್ತ ಅವರು ವಿದ್ಯಾರ್ಥಿನಿಯರ ಮೇಲ್ಮನವಿಗಳನ್ನು ತಿರಸ್ಕರಿಸಿದರು. ನ್ಯಾ.ಸುಧಾಂಶು ಧುಲಿಯಾ ಅವರು ಹಿಜಾಬ್ ನಿಷೇಧಿಸಿ ಕರ್ನಾಟಕ ಸರ್ಕಾರ ಹೊರಡಿಸಿರುವ ಫೆಬ್ರುವರಿ 5ರ ಅಧಿಸೂಚನೆಯನ್ನು ರದ್ದುಪಡಿಸಿದರು. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ತಳೆದರು. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ನ್ಯಾಯ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಿತು.
ನ್ಯಾ.ಸುಧಾಂಶು ಧುಲಿಯಾ, ಹಿಜಾಬ್ ಧರಿಸುವುದು ಆಯ್ಕೆಗೆ ಬಿಟ್ಟಿದ್ದು. ಅದಕ್ಕಿಂತ ಹೆಚ್ಚೂ ಇಲ್ಲ ಕಡಿಮೆಯೂ ಇಲ್ಲ ಎಂದಿರುವ ಅವರು, ಇಂತಹ ನಿರ್ಬಂಧಗಳನ್ನು ಹೇರುವ ಮೂಲಕ ನಾವು ವಿದ್ಯಾರ್ಥಿನಿಯರ ಜೀವನ ಸುಧಾರಿಸುತ್ತಿದ್ದೇವೆಯೇ ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿದೆ ಎಂದರು.
ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸಿ ಅಂತಿಮ ತೀರ್ಪು ಹೊರಬರುವವ ರೆಗೆ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಜಾರಿಯಲ್ಲಿರಲಿದೆ.
‘ಸರ್ಕಾರಿ ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು’ ಎಂದು ಕೋರಲಾಗಿದ್ದ ಎಲ್ಲಾ ವೈಯಕ್ತಿಕ ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಾರ್ಚ್ 15ರಂದು ಸಾರಾಸಗಟಾಗಿ ತಿರಸ್ಕರಿಸಿದ್ದ ಹೈಕೋರ್ಟ್‌ನ ತ್ರಿಸದಸ್ಯ ಪೀಠ, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಸಂಶಯ ವ್ಯಕ್ತಪಡಿಸಿತ್ತು.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ 22 ಅರ್ಜಿದಾರರು, ‘ವಿದ್ಯಾರ್ಥಿಗಳಿಗೆ ಕಡ್ಡಾಯ ವಾದ ಸಮವಸ್ತ್ರ ರೂಪಿಸಿ ಕರ್ನಾಟಕ ಸರ್ಕಾರ ಕಾಯ್ದೆ ಅಥವಾ ನಿಯಮ ಜಾರಿಗೊಳಿಸಿಲ್ಲ. ಹಾಗಾಗಿ, ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಸರಿಯಲ್ಲ. ಹಿಜಾಬ್ ಧರಿಸುವು ದನ್ನು ಸಂವಿಧಾನದ ಅಡಿ ಖಾತರಿಪಡಿಸಲಾದ ಗೋಪ್ಯತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಮೂಲಭೂತ ಹಕ್ಕುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಆದರೆ, ಅದನ್ನು ಅರಿಯದೇ ಹೈಕೋರ್ಟ್ ಪ್ರಮಾದವೆಸಗಿದೆ’ ಎಂದು ಆಕ್ಷೇಪಿಸಿದ್ದರು.