Friday, 30th September 2022

ಉಪಚುನಾವಣೆ: ಅ.20 ರ ಬಳಿಕ ಬಿ.ಎಸ್.ಯಡಿಯೂರಪ್ಪ ಪ್ರಚಾರ: ಬೊಮ್ಮಾಯಿ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಕ್ಟೋಬರ್ 20 ರ ಬಳಿಕ ಹಾನಗಲ್, ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಾನಗಲ್, ಸಿಂದಗಿ ಉಪಚುನಾವಣೆ ನಿಟ್ಟಿನಲ್ಲಿ ಅ.20 ರ ಬಳಿಕ ಬಿ.ಎಸ್. ಯಡಿಯೂರಪ್ಪ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಇಂದು ಯಡಿಯೂರಪ್ಪರನ್ನು ಭೇಟಿಯಾಗಿ ದಸರಾ ಹಬ್ಬದ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದೇನೆ. ಮೈಸೂರಿನಲ್ಲಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ ಎಂದು ತಿಳಿಸಿದ್ದಾರೆ.

ಅ.30 ರಂದು ಹಾನಗಲ್, ಸಿಂದಗಿ ವಿಧಾನಸಭೆ ಉಪಚುನಾವಣೆ ನಡೆಯಲಿದ್ದು, ಅ.20 ರಿಂದ ನಾಲ್ಕು ದಿನ ಎರಡೂ ಕ್ಷೇತ್ರಗಳಲ್ಲಿ ಬಿ.ಎಸ್. ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಅ.20, 21 ರಂದು ಸಿಂದಗಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿರುವ ಬಿ.ಎಸ್. ಯಡಿಯೂರಪ್ಪ, ಅ.22, 23 ರಂದು ಹಾನಗಲ್ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಹಾನಗಲ್, ಸಿಂದಗಿ ಉಪಚುನಾವಣೆಗೆ ಒಟ್ಟು ನಾಲ್ಕು ದಿನ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.