Thursday, 12th December 2024

ಕೋವಿಡ್ ನಿಯಮಾವಳಿ ಉಲ್ಲಂಘನೆ: ನಟ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಪ್ರಕರಣ ದಾಖಲು

ಕೋಯಿಕ್ಕೋಡ್: ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆ ಸೇವೆಯ ಉದ್ಘಾಟನೆಗಾಗಿ ನಟರು ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಸಮಾರಂಭದಲ್ಲಿ 300 ಜನರು ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

‘ನಟ ಮಮ್ಮುಟ್ಟಿ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು. ಈ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮವು ಆ.3ರಂದು ನಡೆದಿತ್ತು.