ಚೆನ್ನೈ : ಎಂಜಿಎಂ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ (74) ಅವರು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.
ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ಗಾಯಕರಾಗಿ ಗುರ್ತಿಸಿಕೊಂಡಿದ್ದಂತ ಮೇರು ಗಾಯಕ. ಇಂತಹ ಗಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಬಾರದ ಲೋಕಕ್ಕೆ ತೆರಳಿದ್ದಾರೆ.
ಎಸ್ ಪಿ ಬಾಲಸುಬ್ರಹ್ಮಣ್ಯಂ ಜೂನ್ 4, 1946ರಲ್ಲಿ ಜನಿಸಿದರು. ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ನಿರಂತರವಾದ ಸಾಧನೆ ಮಾಡುತ್ತಿದ್ದರು.
ಆಂಧ್ರಪ್ರದೇಶ ಚಿತ್ತೂರಿನ ಕೊನೇಟಮ್ಮಪೇಟಾ ಎಂಬಲ್ಲಿನ ಸಂಪ್ರದಾಯಸ್ಥ ಕುಟುಂಬವೊಂದರಲ್ಲಿ ಜನಿಸಿದರು. ಹರಿಕಥೆ ಹೇಳುತ್ತಿದ್ದ ತಂದೆ ಎಸ್.ಪಿ.ಸಾಂಬಮೂರ್ತಿಯವರೇ ಅವರಿಗೆ ಪ್ರೇರಣೆ. ಹಾಡುವುದನ್ನು, ಹಾರ್ಮೋನಿಯಂ, ಕೊಳಲುಗಳನ್ನು ತಮ್ಮಷ್ಟಕ್ಕೆ ತಾವು ನುಡಿಸುತ್ತಾ ಸಂಗೀತದ ಪರ್ವತವೇ ಆದರು. ವಿಧೇಯ ವಿದ್ಯಾರ್ಥಿಯಂತೆ ಶಾಸ್ತ್ರೀಯ ಸಂಗೀತವನ್ನೂ ಅಭ್ಯಾಸ ಮಾಡಿದರು. ಕೋದಂಡಪಾಣಿಯವರು ತಮ್ಮ ತೆಲುಗು ಚಿತ್ರ ‘ಶ್ರೀ ಶ್ರೀ ಶ್ರೀ ಮರ್ಯಾದಾ ರಾಮಣ್ಣ’ದಲ್ಲಿ ಹಾಡಲು ಬಾಲೂಗೆ ಅವಕಾಶ ನೀಡಿದರು.
ಎಸ್ ಪಿ ಬಿ ಸಾಧನೆ: ಬಾಲು ಚಿತ್ರರಂಗಕ್ಕೆ ಬಂದು ಈ ಎಲ್ಲ ಭಾಷೆಗಳಿಗೂ ಸಾರ್ವಭೌಮರಾಗಿಬಿಟ್ಟರು. ಒಮ್ಮೆ ಅವರು ತಮಿಳು ತೆಲುಗಿನಲ್ಲಿ ಒಂದೇ ದಿನದಲ್ಲಿ 19 ಗೀತೆಗಳನ್ನು ಧ್ವನಿಮುದ್ರಿಸಿದ್ದರು.
ಕನ್ನಡದಲ್ಲಿ ಒಂದೇ ದಿನ 17 ಗೀತೆಗಳನ್ನು ಧ್ವನಿಮುದ್ರಿಸಿದ್ದರು, ಹಿಂದಿಯಲ್ಲಿ ಒಂದೇ ದಿನ 16 ಹಾಡುಗಳನ್ನು ಧ್ವನಿಮುದ್ರಿಸಿ ದ್ದರು. ದಕ್ಷಿಣ ಭಾರತದ ರಜನೀಕಾಂತ್, ಕಮಲಹಾಸನ್, ಚಿರಂಜೀವಿ ಹೀಗೆ ಎಪ್ಪತ್ತು ಎಂಭತ್ತರ ದಶಕದಿಂದ ಎರಡು ಸಾವಿರದ ದಶಕದವರೆಗಿನ ಬಹುತೇಕ ಹೀರೋಗಳ ಅಂತರ್ಧ್ವನಿ ಶಕ್ತಿ ಬಾಲು ಅವರದ್ದು.
ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದು 40 ಸಾವಿರಕ್ಕೂ ಹೆಚ್ಚು ಹಾಡುಗಳು
ಹಿಂದಿಯಲ್ಲಿ ಏಕ್ ದೂಜೇ ಕೆ ಲಿಯೇ ಬಂದಾಗ ಬಾಲು ಹಿಂದಿ ಚಿತ್ರರಂಗವನ್ನೂ ತಮ್ಮ ಮೋಡಿಗೆ ಸೆಳೆದುಕೊಂಡರು. ಸಾಜನ್, ಮೈ ನೇ ಪ್ಯಾರ್ ಕಿಯಾ ಮುಂತಾದ ಚಿತ್ರಗಳು ಬಂದಾಗ ರಫಿ, ಕಿಶೋರ್ ಅವರನ್ನು ಕಳೆದುಕೊಂಡು ಕಂಗಾಲಾಗಿದ್ದ ಹಿಂದಿ ಚಿತ್ರರಂಗಕ್ಕೆ ಬಾಲು ಬೆನ್ನೆಲುಬಾಗಿದ್ದರು.
ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ, ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ 40,000 ಕ್ಕೂ ಹೆಚ್ಚು.
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ರಾಜ್ಯದ ಸಂಸದರು, ಶಾಸಕರು ಹಾಗೂ ಸಚಿವರು ಟ್ವಿಟರ್’ನಲ್ಲಿ ಸಂತಾಪ ಸೂಚಿಸಿದ್ದಾರೆ.