Thursday, 1st December 2022

ಬಿಕ್ಕಟ್ಟು ಸುಖಾಂತ್ಯ: ಆನಂದ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ.

ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಆನಂದ್ ಸಿಂಗ್ ಕೊನೆಗೂ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಖಾತೆ ಬದಲಾವಣೆ ಮಾಡುವಂತೆ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಮಾತುಕತೆ ನಡೆಸಿ ಸೂಕ್ತ ನ್ಯಾಯ ಒದಗಿಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಕೊನೆಗೂ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದರು.

ಕಂದಾಯ ಸಚಿವ ಆರ್.ಅಶೋಕ್, ಶಾಸಕ ರಾಜುಗೌಡ ನಾಯಕ್ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಇಂದೇ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗೆ ತೆರಳಿ ಅಧಿಕಾರವನ್ನೂ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಭೇಟಿ ಯಾಗಿ ನನ್ನ ಸಮಸ್ಯೆಯನ್ನು ಮನವರಿಕೆ ಮಾಡಿದ್ದೇನೆ. ಅವರ ಮಾತಿನ ಮೇಲೆ ನಂಬಿಕೆ ಇರುವುದರಿಂದ ಈಗ ಕೊಟ್ಟಿರುವ ಖಾತೆಯಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದರು.

ಪಕ್ಷದ ತೀರ್ಮಾನ ಹಾಗೂ ಮುಖ್ಯಮಂತ್ರಿಗಳ ಸೂಚನೆಯಂತೆ ನಾನು ನಡೆದುಕೊಳ್ಳುವುದು ನನ್ನ ಕರ್ತವ್ಯ. ವರಿಷ್ಠರ ಜೊತೆ ಚರ್ಚಿಸಿ ನ್ಯಾಯ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಹೀಗಾಗಿ ಈಗಿರುವ ಖಾತೆಯಲ್ಲೇ ಸಚಿವನಾಗಿ ಮುಂದುವರೆಯುತ್ತೇನೆ ಎಂದು ಹೇಳಿದರು.