Sunday, 15th December 2024

ಎರಡು ಪ್ರತ್ಯೇಕ ಅಪಘಾತ: 39 ಮಂದಿ ಸಾವು

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ  ಕಳೆದ 24 ಗಂಟೆಗಳ ಅವಧಿಯಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 39 ಮಂದಿ ಮೃತಪಟ್ಟಿದ್ದಾರೆ.

ಈ ಪೈಕಿ 27 ಮಂದಿ ಟ್ರಾಕ್ಟರ್ ಟ್ರಾಲಿ ಪಲ್ಟಿಯಾಗಿ ಕೆರೆಗೆ ಬಿದ್ದದ್ದರಿಂದ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳೇ ಆಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕಾನ್ಪುರದ ಅಹಿರವಾನ್ ಫ್ಲೈಓವರ್‍ನಲ್ಲಿ ಟ್ರಕ್‍ವೊಂದು ಟೆಂಪೋಗೆ ಡಿಕ್ಕಿ ಹೊಡೆದು 12 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ.

ಸುಮಾರು 50 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರಾಕ್ಟರ್-ಟ್ರಾಲಿಯು ಘಟಂಪುರಕ್ಕೆ ತೆರಳುತ್ತಿದ್ದಾಗ ಫ್ಲೈಓವರ್ ಮೇಲೆ ಬರುತ್ತಿದ್ದ ಟೆಂಪೋಗೆ ಡಿಕ್ಕಿ ಹೊಡೆದು ಈಘಟನೆ ನಡೆದಿದೆ. ಪ್ರಯಾಣಿಕರೆಲ್ಲರೂ ಫತೇಪುರ್‍ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ ಸಮಾ ರಂಭದಲ್ಲಿ ಪಾಲ್ಗೊಂಡು ವಾಪಸ್ಸಾಗುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸೂಕ್ತ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.