ಸುಲ್ತಾನ್‌ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಮಾನಹಾನಿ ಹೇಳಿಕೆ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ 2018ರಲ್ಲಿ ದಾಖಲಾದ ಪ್ರಕರಣದ ವಿಚಾರಣೆ ಮೇ 14ರಂದು ನಡೆಯಲಿದೆ.
‘ಇಂದು ವಿಚಾರಣೆ ನಿಗದಿಯಾಗಿತ್ತು. ಆದರೆ ನ್ಯಾಯಮೂರ್ತಿಗಳು ನಿಗದಿಯಾಗದ ಕಾರಣ ಮುಂದೂಡಲಾಯಿತು. ಮೇ 14ರಂದು ವಿಚಾರಣೆ ನಡೆಯಲಿದೆ’ ಎಂದು ರಾಹುಲ್ ಗಾಂಧಿ ಪರ ವಕೀಲರು ತಿಳಿಸಿದ್ದಾರೆ.
ಬಿಜೆಪಿ ನಾಯಕ ವಿಜಯ್ ಮಿಶ್ರಾ ಎನ್ನುವವರು ಆರು ವರ್ಷದ ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ದೂರು ದಾಖಲಿಸಿದ್ದರು.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಇದೇ ಪ್ರಕರಣ ಸಂಬಂಧ ರಾಹುಲ್ ಗಾಂಧಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿತ್ತು. ಫೆಬ್ರುವರಿ 20ರಂದು ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.
2018ರ ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು.