Friday, 13th December 2024

ಆಂಧ್ರಪ್ರದೇಶದಲ್ಲಿ ರೈಲು ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಆಂಧ್ರಪ್ರದೇಶ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಹೌರಾ-ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ ಮತ್ತು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ದೀಪಿಕಾ ಸೋಮವಾರ ತಿಳಿಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಲಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಹಾಗೂ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಮೃತರ ಕುಟುಂಬಗಳಿಗೆ ₹10 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಧನಸಹಾಯ ಘೋಷಿಸಿದ್ದಾರೆ ಎಂದು ಪಿಎಂಒ ಕಚೇರಿ ತಿಳಿಸಿದೆ