ನವದೆಹಲಿ: ದೆಹಲಿ ವಿಧಾನ ಸಭಾ ಚುನಾವಣೆಗೂ ಮುನ್ನವೇ ಆಮ್ ಆದ್ಮಿ ಪಕ್ಷಕ್ಕೆ (Aam Aadmi party) ಭಾರೀ ಸಂಕಷ್ಟ ಎದುರಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ (LG) ವಿಕೆ ಸಕ್ಸೇನಾ (VK Saxena) ಅವರು ಎಎಪಿ ಮುಖ್ಯಸ್ಥ ಮತ್ತು ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ.
ದೆಹಲಿ ಸರ್ಕಾರದ ಅಬಕಾರಿ ನೀತಿ ಭ್ರಷ್ಟಾಚಾರದ ಆರೋಪದ ಮೇಲೆ ಡಿಸೆಂಬರ್ 5ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಎಲ್‌ಜಿ ವಿಕೆ ಸಕ್ಸೇನಾ ಅವರು ಕೇಜ್ರಿವಾಲ್ ಅವರ ವಿಚಾರಣೆಗೆ ಅನುಮತಿ ನೀಡಿದ್ದಾರೆ.
ಈತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ ಅರ್ಜಿಗೆ ಉತ್ತರವನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಹೆಚ್ಚುವರಿ ಸಮಯವನ್ನು ನೀಡಿದೆ. ದೆಹಲಿ ಅಬಕಾರಿ ಮದ್ಯ ನೀತಿ ಪ್ರಕರಣದ ಆರೋಪ ಪಟ್ಟಿಗಳನ್ನು ವಿಚಾರಣೆಗೆ ತೆಗೆದುಕೊಳ್ಳುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಅರ್ಜಿಯು ಪ್ರಶ್ನಿಸಿದೆ. ಈ ಪ್ರಕರಣವನ್ನು ಫೆಬ್ರವರಿ 5ರಂದು ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ಅವರ ಪೀಠವು ವಿಚಾರಣೆಗೆ ನಿಗದಿಪಡಿಸಿದೆ.
ಇದಕ್ಕೆ ಹೊರತಾಗಿ, ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಆರೋಪ ಪಟ್ಟಿಯನ್ನು ಪರಿಗಣಿಸುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಇತ್ತೀಚೆಗೆ ನೋಟಿಸ್ ಜಾರಿಗೊಳಿಸಿತ್ತು.
ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡೂ ಪ್ರಕರಣಗಳಲ್ಲಿ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.
ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಎಎಪಿ ನಾಯಕರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿಯನ್ನು ಉದ್ದೇಶಪೂರ್ವಕವಾಗಿ ಲೋಪ ದೋಷಗಳೊಂದಿಗೆ ಜಾರಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕೋವಿಡ್ -19 ಅಡೆತಡೆಗಳ ಸಮಯದಲ್ಲಿ ಪರಿಹಾರ ಹಾಗೂ ಚಿಕಿತ್ಸೆಗೆ ಬದಲಾಗಿ ಎಎಪಿ ನಾಯಕರು ಮದ್ಯದ ವ್ಯವಹಾರಗಳಿಂದ ಕಿಕ್‌ಬ್ಯಾಕ್ ಸ್ವೀಕರಿಸಿದ್ದರು ಎಂದು ಇಡಿ ಆರೋಪಿಸಿದೆ.
ಸದ್ಯದಲ್ಲಿಯೇ ದೆಹಲಿಯಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ನವದೆಹಲಿ ಕ್ಷೇತ್ರದಿಂದ ಕೇಜ್ರಿವಾಲ್ ಸ್ಪರ್ಧೆ ಮಾಡಲಿದ್ದಾರೆ. ಈ ವಿಚಾರಣೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯಾ ಎಂಬ ಪ್ರಶ್ನೆ ಮೂಡಿದೆ.
ಈ ಸುದ್ದಿಯನ್ನೂ ಓದಿ : Arvind Kejriwal: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್