ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸೋಮವಾರ ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗ್ಗೆ 15ರಿಂದ 20 ಮಂದಿ ಗುಂಪುಗೂಡಿದ್ದು, ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದರು. ಪೊಲೀಸರ ಹೇಳಿಕೆ ಪ್ರಕಾರ, ಪ್ರತಿಭಟನಾಕಾರರು ಕಾಂಗ್ರೆಸ್ ಪರ ಘೋಷಣೆ ಕೂಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ರೈತರ ಹಾಗೂ ವಿಪಕ್ಷಗಳ ವಿರೋಧದ ನಡುವೆಯೇ ಸಂಸತ್ ನಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ.
ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.
ಕರ್ನಾಟಕದಲ್ಲಿಯೂ ರಾಜ್ಯ ಬಂದ್ ಗೆ ರೈತ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ರಾಜ್ಯದಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವಂತೆ ತಿಳಿಸಿದ್ದರು.
ಪಂಜಾಬ್: ಭಾನುವಾರ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ಕೈ ಬಿಡುವಂತೆ ಆಗ್ರಹಿಸಿ ಪಂಜಾಬ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮೃತಸರ್-ದೆಹಲಿ ರೈಲ್ವೆ ಮಾರ್ಗದ ಹಳಿಯ ಮೇಲೆ ಕುಳಿತು ರೈತರು ಪ್ರತಿಭಟನೆ ನಡೆಸಿದರು. ಭಾರತ್ ಬಂದ್ ಮತ್ತು ರೈತರ ತೀವ್ರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳುಹಿಸಿದ್ದ ಮೂರು ಮಸೂದೆಗಳಿಗೆ ಈಗಾಗಲೇ ಅಂಕಿತ ಹಾಕಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದ್ದ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿತ್ತು. ಶುಕ್ರವಾರವಷ್ಟೇ ಕೃಷಿ ಸಂಬಂಧಿತ ಮಸೂದೆ ಜಾರಿ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೃಷಿ ಸಂಬಂಧಿತ ಮಸೂದೆಗಳಿಗೆ ಅಂಕಿತ ಹಾಕಿದ ಕೆಲವೇ ಕ್ಷಣಗಳಲ್ಲಿ ಹಲವು ವರ್ಷಗಳಿಂದ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಶಿರೋಮಣಿ ಅಕಾಲಿ ದಳವು ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ.