Saturday, 14th December 2024

ಮಧ್ಯಂತರ ಜಾಮೀನಿನ ವಿಸ್ತರಣೆ ಕೋರಿ ಕೇಜ್ರಿವಾಲ್ ಅರ್ಜಿ

ವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನೀಡಲಾಗಿರುವ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸುವು ಅತ್ಯಗತ್ಯ ಎಂದು ಹೇಳಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಹೇಳಿದೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ, ಏಳು ಹಂತದ ಲೋಕಸಭೆ ಚುನಾವಣೆಯ ಕೊನೆಯ ದಿನವಾದ ಜೂನ್ 1 ರವರೆಗೆ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಜೂನ್ 2 ರಂದು ಶರಣಾಗಲು ಮತ್ತು ಜೈಲಿಗೆ ಮರಳಲು ಸೂಚಿಸಿದೆ.

ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಲು ಜಾಮೀನು ವಿಸ್ತರಣೆ ಬೇಕಿದ್ದು, ವಿಸ್ತರಣೆಯನ್ನು ಪರಿಗಣಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ ತಂಡವು ವಿಚಾರಣೆ ನಡೆಸಿ, ನಂತರ ಬಂಧಿಸಿತ್ತು. ಅದಕ್ಕೂ ಮುನ್ನ, ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಂತಹ ಪ್ರಮುಖ ಎಎಪಿ ನಾಯಕರು ಭ್ರಷ್ಟಾಚಾರದ ಆರೋಪಗಳ ಮೇಲೆ ಈಗಾಗಲೇ ಜೈಲಿನಲ್ಲಿದ್ದಾರೆ. ಸಂಜಯ್ ಸಿಂಗ್ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದಾರೆ.