Saturday, 14th December 2024

ಬಂಡಿಪೋರಾದಲ್ಲಿ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಬಂಡಿಪೋರಾ ಜಿಲ್ಲೆಯ ಅರಗಾಮ್ ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಭಯೋತ್ಪಾದಕರು ಅವಿತು ಕುಳಿತಿದ್ದ ಅಡಗುತಾಣವನ್ನು ಭದ್ರತಾ ಪಡೆಗಳು ಸುತ್ತುವರಿದಾಗ ಗುಂಡಿನ ಚಕಮಕಿ ಆರಂಭವಾಯಿತು. ಎನ್‌ಕೌಂಟರ್‌ ನಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ.

ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಗುರುತು ಕಂಡು ಹಿಡಿಯಲು ಯತ್ನಿಸಲಾಗುತ್ತಿದೆ ಎಂದೂ ತಿಳಿಸಿದ್ದಾರೆ.

ಆರಂಭದಲ್ಲಿ ಗ್ರಾಮದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಆಗಮಿಸಿ ಅವರನ್ನು ಸುತ್ತುವರಿದ ಬಳಿಕ ಸುಮ್ಮನಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.