ನವದೆಹಲಿ: ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬಿಜೆಪಿ ಶುಕ್ರವಾರ 5 ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.
ಮಹಿಳೆಯನ್ನು ಅಮಾನುಷವಾಗಿ ನಡೆಸಿಕೊಂಡ ಘಟನೆ ಖಂಡಿಸಿರುವ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಮಿತಿ ರಚಿಸಿದ್ದಾರೆ.
ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಸತ್ಯಶೋಧನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಸಮಿತಿಯ ಸದಸ್ಯರಾಗಿದ್ದಾರೆ.
“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ. ವಿಶೇಷವಾಗಿ ಮಹಿಳೆಯರ ವಿರುದ್ಧ ಇಂತಹ ಘಟನೆಗಳು ವರದಿಯಾಗುತ್ತಿವೆ. ಅಪರಾಧಗಳನ್ನು ನಿಭಾಯಿಸುವಲ್ಲಿ ದೇಶದೆಲ್ಲೆಡೆ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ ಸರ್ಕಾರಗಳ ಬೇಜವಾಬ್ದಾರಿ ವರ್ತನೆ ಯನ್ನು ಇದು ಬಹಿರಂಗಪಡಿಸುತ್ತದೆ” ಎಂದು ಟೀಕಿಸಿದ್ದಾರೆ.
ಈ ಘಟನೆಯನ್ನು ಖಂಡಿಸಿ ಕರ್ನಾಟಕದ ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು.