Saturday, 9th November 2024

ಭಾರತ್‌ ಬಂದ್‌: ದೇಶದೆಲ್ಲೆಡೆ ಸಾಲು ಸಾಲು ಪ್ರತಿಭಟನೆ

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ಭಾರತ್‌ ಬಂದ್‌ಗೆ ಕರೆ ನೀಡಿದ ಬೆನ್ನಲ್ಲೇ ಪ್ರತಿಭಟನೆಗಳು ಆರಂಭಗೊಂಡಿವೆ.

ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ದೆಹಲಿಯ ಗಾಜಿಪುರ, ಸಿಂಘು ಗಡಿಗಳಲ್ಲಿ ಧರಣಿ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಆಂದ್ರಪ್ರದೇಶದ ವಿಶಾಖಪಟ್ಟಣದಲ್ಲಿ ಎಡಪಕ್ಷಗಳ ಕಾರ್ಯಕರ್ತರು ರಸ್ತೆಗಳನ್ನು ತಡೆದು, ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ನಾಲ್ಕು ತಿಂಗಳು ಪೂರ್ಣಗೊಳಿಸುತ್ತಿರುವ ಬೆನ್ನಲ್ಲೇ ರೈತ ಸಂಘಟನೆಗಳ ಒಕ್ಕೂಟ ಬಂದ್‌ಗೆ ಕರೆ ನೀಡಿದೆ.

ದೇಶದಾದ್ಯಂತ ಬೆಳಿಗ್ಗೆ 6ರಿಂದ ಸಂಜೆ 6ರವರೆಗೂ ಶಾಂತಿಯುತ ಬಂದ್ ಆಚರಿಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಚುನಾವಣೆ ನಡೆಯಲಿರುವ ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ ಹಾಗೂ ಪುದುಚೇರಿಯಲ್ಲಿ ಬಂದ್‌ ಆಚರಿಸದಂತೆ ಸಂಯುಕ್ತ ಕಿಸಾನ್ ಮೋರ್ಚಾ ಜನರಲ್ಲಿ ವಿನಂತಿಸಿದೆ.

ಹೊಸ ಕೃಷಿ ಕಾಯ್ದೆಗಳನ್ನು 12-18 ತಿಂಗಳ ವರೆಗೂ ಅಮಾನತಿನಲ್ಲಿ ಇಡುವ ಪ್ರಸ್ತಾಪವನ್ನು ಸರ್ಕಾರ ಜನವರಿಯಲ್ಲಿ ಮುಂದಿಟ್ಟಿತ್ತು. ರೈತ ಸಂಘಟನೆಗಳು ಆ ಪ್ರಸ್ತಾಪವನ್ನು ತಿರಸ್ಕರಿಸಿ ಪ್ರತಿಭಟನೆ ಮುಂದುವರಿಸಿದವು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily