ತಿರುವನಂತಪುರ: ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಭಾನುವಾರ ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಕಾಂಗ್ರೆಸ್ ಯಾವುದೇ ಉಲ್ಲೇಖ ಮಾಡಿರಲಿಲ್ಲ. ಆದರೂ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದಾರೆ.
‘ಮೋದಿ ಗ್ಯಾರಂಟಿ’ ಎಂದು ಹೆಸರಿಸಲಾಗಿರುವ ಬಿಜೆಪಿಯ ಪ್ರಣಾಳಿಕೆಯ ವಿರುದ್ಧ ವಾಗ್ದಾಳಿ ನಡೆಸಿರುವ ಚಿದಂಬರಂ, ಬಿಜೆಪಿ ಈಗ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಾಧಿಸುವ ಪಂಗಡವಾಗಿ ಮಾರ್ಪಾಟ್ಟಿದೆ ಎಂದು ಆರೋಪಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆದಿದ್ದು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಜನರು ಮುಂದಾಗಬೇಕು ಎಂದು ಒತ್ತಾಯಿಸಿದರು.
ತಮಿಳುನಾಡಿನಲ್ಲಿ ಎಲ್ಲ 39 ಮತ್ತು ಪುದುಚೇರಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ದಾಖಲಿಸಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.