Saturday, 14th December 2024

ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈ ಕೋರ್ಟ್‌ ವಜಾಗೊಳಿಸಿದ್ದು, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್‌ ಕಿಶನ್ ಕೌಲ್ ನೇತೃತ್ವದ ಪೀಠ ‘ನಾವು ಹೈಕೋರ್ಟ್‌ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಇದು ಖಾಸಗಿ ಬ್ಯಾಂಕ್ ಮತ್ತು ಉದ್ಯೋಗಿ ವ್ಯಾಪ್ತಿಗೆ ಒಳಪಡುತ್ತದೆ’ ಎಂದು ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದ ಕಾರಣ ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರ ಸೇವೆಯಿಂದ ಚಂದಾ ಕೊಚ್ಚಾರ್ ವಜಾಗೊಂಡಿದ್ದರು. ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈ ಕೋರ್ಟ್‌ ಮಾ. 5 ರಂದು ಈ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.