ಲಖನೌ: ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಿಸಲಿದೆ. ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮತ್ತಿತರರು ಆರೋಪಿಗಳಾಗಿದ್ದಾರೆ.
ಕೋವಿಡ್-19 ದೃಢಪಟ್ಟಿರುವ ಉಮಾ ಭಾರತಿ ಹಾಗೂ ಕಲ್ಯಾಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಯಾಣ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಾಬರಿ ಮಸೀದಿ ಧ್ವಂಸ ಘಟನೆ ನಡೆದಿತ್ತು. ರಾಜಸ್ಥಾನದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಅವಧಿ ಕಳೆದ ಸೆಪ್ಟೆಂಬರ್‌ನಲ್ಲಿ ಪೂರ್ಣಗೊಂಡಿತ್ತು. ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಕೂಡಾ ಪ್ರಕರಣದ ಆರೋಪಿಯಾಗಿದ್ದಾರೆ.
ವಿಶೇಷ ನ್ಯಾಯಾಲಯದ ಮುಂದೆ 351 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ಸಿಬಿಐ ಸಲ್ಲಿಸಿದ್ದು, 48 ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು. ವಿಚಾರಣೆಯ ಸುದೀರ್ಘ ಅವಧಿಯಲ್ಲಿ ಆರೋಪಿಗಳ ಪೈಕಿ 17 ಜನರು ಮೃತಪಟ್ಟಿದ್ದಾರೆ.
‘ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಪಿತೂರಿ ನಡೆಸಿ ‘ಕರಸೇವಕ’ರಿಗೆ ಪ್ರಚೋದಿಸಿದ್ದರು’ ಎಂದು ಸಿಬಿಐ ವಾದ ಮಂಡಿಸಿತ್ತು. ಈ ಆರೋಪವನ್ನು ತಳ್ಳಿ ಹಾಕಿದ್ದ ಆರೋಪಿಗಳು, ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ತಮ್ಮ ವಿರುದ್ಧದ ದೋಷಾರೋಪಣೆ ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ರಾಜಕೀಯ ಒಳಸಂಚು ಎಂದು ಪ್ರತಿವಾದ ಮಂಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಮತ್ತು ರಾಯಬರೇಲಿಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಬಿಜೆಪಿ ನಾಯಕರ ವಿರುದ್ಧದ ಆರೋಪ ಕೈಬಿಡುವಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನೂ ಸುಪ್ರೀಂ ಕೋರ್ಟ್ ಅಂದು ರದ್ದುಪಡಿಸಿತ್ತು.
ಪ್ರಕರಣವೇನು?: ಅಯೋಧ್ಯೆಯಲ್ಲಿ ರಾಮ ಮಂದಿರವಿದ್ದ ನಿವೇಶನದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದ ‘ಕರಸೇವಕರು’ 1992ರ ಡಿಸೆಂಬರ್ 6ರಂದು, ಮಸೀದಿಯನ್ನು ಧ್ವಂಸ ಮಾಡಿದ್ದರು.