ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ
ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್
ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ
ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವಿಕೆ ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತಹ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಭಾನುವಾರ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನವದೆಹಲಿಯಲ್ಲಿ ದೈನಂದಿನ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಬಹುತೇಕ ಇಮ್ಮಡಿಯಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಗೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹಾಗೂ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವುದಕ್ಕೆ ತೀರ್ಮಾನಿಸಲಾಗಿದೆ.
ರಾಜಧಾನಿಯಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತುಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಸಚಿವ ಹರ್ಷವರ್ಧನ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಪ್ರತಿನಿತ್ಯ ಕೊವಿಡ್-19 ಸೋಂಕು ತಪಾಸಣೆ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗುತ್ತದೆ. ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆಯಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಸೋಂಕಿತ ಪ್ರಕರಣಗಳ ಸಂಖ್ಯೆಯು ಹೆಚ್ಚಾಗಿರುವ ಹಿನ್ನೆಲೆ ಕಳೆದ ವಾರ ದೆಹಲಿ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿ ಸಿತ್ತು. ನವದೆಹಲಿಯ 33 ಖಾಸಗಿ ಆಸ್ಪತ್ರೆಗಳಲ್ಲಿನ ಶೇ.80ರಷ್ಟು ಬೆಡ್ ಗಳನ್ನು ಕೊರೊನಾವೈರಸ್ ರೋಗಿಗಳಿಗೆ ಮೀಸಲು ಇರಿಸುವಂತೆ ಆದೇಶಿಸಿತ್ತು.