ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಶನಿವಾರ ಮಧ್ಯಾಹ್ನಪ್ರಕಟಿಸಲಿದೆ ಎಂದು ಚುನಾವಣಾ ಸಂಸ್ಥೆಯ ಹೇಳಿಕೆ ತಿಳಿಸಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.