Saturday, 23rd November 2024

100 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಎಕ್ಸ್‌ಪ್ರೆಸ್ ಹೆದ್ದಾರಿ ಬಂದ್

ನವದೆಹಲಿ: ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಶನಿವಾರ ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್ ಹೆದ್ದಾರಿ ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ.

ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಸಂಜೆ 4 ಗಂಟೆಯವರೆಗೂ ಬಂದ್ ಮುಂದು ವರೆಯ ಲಿದೆ. ಹರ್ಯಾಣ, ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು 2020ರ ನವೆಂಬರ್ ನಿಂದ ದೆಹಲಿಯ ಸಿಂಘು, ಟಿಕ್ರಿ, ಗಾಜಿಪುರ್ ಗಡಿಗಳಲ್ಲಿ ಕೆಂದ್ರದ ಮೂರು ಕೃಷಿ ಕಾಯ್ದೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸು ತ್ತಿದ್ದು, ಇಂದು 100ನೇ ದಿನಕ್ಕೆ ಕಾಲಿಟ್ಟಿದೆ.

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ಮುಂದುವರೆಸಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ನಿಲ್ಲಲ್ಲ. ಮೋದಿ ಸರ್ಕಾರ ರೈತರ ನೋವನ್ನು ಅರ್ಥೈಸಿಕೊಳ್ಳುತ್ತಿಲ್ಲ ಎಂದು ಪಂಜಾಬ್ ನ ರೈತ ರಾಜಾ ಸಿಂಗ್ ಹೇಳಿದ್ದಾರೆ.

ಏತನ್ಮಧ್ಯೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಾರ್ಚ್ 5ರಂದು ಕೂಡ “ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ಶೋಷಣೆ ನಡೆಸುತ್ತಿದೆ” ಎಂದು ಕಿಡಿಕಾರಿದ್ದಾರೆ.