Friday, 22nd November 2024

ಪಟಾಕಿ ಕಾರ್ಖಾನೆ ಅಗ್ನಿ ಅವಘಡ: ಮೃತರ ಸಂಖ್ಯೆ 19ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಒಂಬತ್ತು ಮಂದಿ ಘಟನೆ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದರು. ಮೂವತ್ತು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ವೇಳೆ ರಾಸಾಯನಿಕ ಮಿಶ್ರಣ ಮಾಡಿದ್ದೇ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಘಟನೆ ಕುರಿತು ತನಿಖೆಗೆ ಆದೇಶಿಸಿರುವುದಾಗಿ ಸಿಎಂ ಪಳನಿಸ್ವಾಮಿ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಸುಮಾರು 100 ಮಂದಿ ಕಾರ್ಮಿಕರಿದ್ದು, ಘಟನೆ ಸಂದರ್ಭ 50 ಮಂದಿ ಕೆಲಸ ಮಾಡುತ್ತಿದ್ದರು. ಐದು ಅಗ್ನಿ ಶಾಮಕ ದಳ ವಾಹನಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ತಗ್ಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸತ್ತೂರು, ಕೋವಿಲ್ ಪಟ್ಟಿ, ಶಿವಕಾಶಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಿಸಿ ಮಾಹಿತಿ ನೀಡಿದ್ದಾರೆ.