Saturday, 23rd November 2024

ಪಂಚ ರಾಜ್ಯಗಳ ಚುನಾವಣೆ: ’ಕೈ’ನ ಮೊದಲ ಪಟ್ಟಿ ಬಿಡುಗಡೆ

ವದೆಹಲಿ: ಕಾಂಗ್ರೆಸ್‌ ಪಕ್ಷ ಭಾನುವಾರ ಮೂರು ರಾಜ್ಯಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ.

ಭಾನುವಾರ ಎಐಸಿಸಿ ಛತ್ತೀಸ್‌ ಗಢ್, ತೆಲಂಗಾಣ ಮತ್ತು ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್‌ ಗಢ್‌ಗೆ 30 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಿಎಂ ಭೂಪೇಶ್‌ ಬಾಘೇಲ್ ಪಟ್ನಾದಿಂದ ಮತ್ತು ಉಪ ಮುಖ್ಯಮಂತ್ರಿ ಟಿಎಸ್ ಸಿಂಗ್ ಡಿಯೋ ಅಂಬಿಕಾಪುರ್‌ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಗೆ 55 ಅಭ್ಯರ್ಥಿಗಳನ್ನು ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಘೋಷಣೆ ಮಾಡಿದೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಕೊಡಂಗಲ್‌ ಕ್ಷೇತ್ರದಿಂದ ಚುನಾವಣಗೆ ಸ್ಪರ್ಧಿಸ ಲಿದ್ದಾರೆ.

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 144 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಚಿಂಡ್‌ವಾಲಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ತೆಲಂಗಾಣದ ವಿಧಾನಸಭೆಯ 119 ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಸದ್ಯ ಬಿಆರ್‌ಎಸ್ ಪಕ್ಷ ಅಧಿಕಾರದಲ್ಲಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಿವೆ.

ಛತ್ತೀಸ್‌ ಗಢ್‌ ವಿಧಾನಸಭೆಯ 90 ಸ್ಥಾನಗಳಿಗೆ ಎರಡು ಹಂತದಲ್ಲಿ ನವೆಂಬರ್ 7, 17ರಂದು ಚುನಾವಣೆ ನಡೆಯಲಿದೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್‌ 17ರಂದು ಚುನಾ ವಣೆ ನಡೆಯಲಿದೆ. ಎಲ್ಲಾ ರಾಜ್ಯಗಳ ಮತ ಎಣಿಕೆ ಒಂದೇ ಬಾರಿಗೆ ಡಿಸೆಂಬರ್ 3ರ ಭಾನುವಾರ ನಡೆಯಲಿದೆ.

ಛತ್ತೀಸ್‌ಗಢ್‌, ಮಧ್ಯ ಪ್ರದೇಶ ಮತ್ತು ತೆಲಂಗಾಣ ರಾಜ್ಯದ ಜೊತೆಗೆ ರಾಜಸ್ಥಾನ ಮತ್ತು ಮಿಜೋರಾಂ ರಾಜ್ಯದಲ್ಲಿಯೂ ಸಹ ವಿಧಾನಸಭೆ ಚುನಾವಣೆ ನಡೆಯಲಿದೆ. 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿಯನ್ನು ಘೊಷಣೆ ಮಾಡಿದೆ.

2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು 5 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ 5 ರಾಜ್ಯಗಳ ಚುನಾವಣೆಯಲ್ಲಿ ಗೆಲ್ಲಲು ತಂತ್ರಗಳನ್ನು ರೂಪಿಸುತ್ತಿದೆ. ಇಂಡಿಯಾ ಮೈತ್ರಿಕೂಟ ರಚನೆಗೊಂಡ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸಲಾಗುತ್ತಿದೆ.