Thursday, 12th December 2024

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಗೋವಾ ಸಿಎಂ ಆಯ್ಕೆ ಇಂದು

ಪಣಜಿ: ಗೋವಾ ವಿಧಾನಸಭೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆದ್ದು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಫಲಿತಾಂಶ ಪ್ರಕಟಗೊಂಡ 11 ದಿನಗಳ ನಂತರ ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಗೋವಾದಲ್ಲಿ ಬಿಜೆಪಿ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುತ್ತಿದ್ದು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮುಖ್ಯಮಂತ್ರಿ ಸ್ಥಾನದ ಫೇವರಿಟ್ ಆಗಿದ್ದಾರೆ.

ಸಾವಂತ್ ಹೊರತುಪಡಿಸಿದರೆ ಮಾಜಿ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮತ್ತು ಹಿಮಾ ಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ಹೆಸರುಗಳನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಚರ್ಚೆಯಲ್ಲಿರುವುದಾಗಿ ಗೋವಾದ ಹಿರಿಯ ಬಿಜೆಪಿ ಮುಖಂಡರೊಬ್ಬರು ಸೋಮವಾರ ತಿಳಿಸಿದ್ದಾರೆ.

ಗೋವಾದಲ್ಲಿನ ನೂತನ ಸರ್ಕಾರದ ಪದಗ್ರಹಣ ಸಮಾರಂಭ ಮಾ.23 ಮತ್ತು 25ರ ನಡುವೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಹಿರಿಯ ಮುಖಂಡರು ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್ ಮುರುಗನ್ ಸೋಮವಾರ ಮಧ್ಯಾಹ್ನ ಪಣಜಿಗೆ ಆಗಮಿಸಲಿದ್ದು, ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಕ್ಕೆ ಬಿಜೆಪಿ ಮುಖಂಡರು ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಸಂಜೆ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.