ಪಣಜಿ: ಬಿಜೆಪಿ ಜೊತೆಗೆ ಸಖ್ಯ ಬೆಳೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ 11 ಶಾಸಕರ ಪೈಕಿ ಇಬ್ಬರು ಶಾಸಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ಅವರನ್ನು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸಬೇಕು ಎಂದು ವಿಧಾನಸಭೆಯ ಸ್ಪೀಕರ್‌ಗೆ ಮನವಿ ಮಾಡಿದೆ.
ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿಯ ಬೆನ್ನಲ್ಲೇ ನೆರೆ ರಾಜ್ಯ ಗೋವಾ ಕಾಂಗ್ರೆಸ್ ನಲ್ಲೂ ಭಿನ್ನಮತ ಸ್ಫೋಟಗೊಂಡಿದೆ.
ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ದಿನೇಶ್ ಗುಂಡೂರಾವ್ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಅವರು ದಿನೇಶ್ ಗುಂಡೂರಾವ್ ಅವರ ಹೇಳಿಕೆ ಆಘಾತ ಮತ್ತು ದಿಗ್ಭ್ರಮೆ ಮೂಡಿಸಿದೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ಸ್ಪೀಕರ್ ಗೆ ಮನವಿ ಮಾಡಿದೆ.
ಕಾಂಗ್ರೆಸ್ ಈ ಹಿಂದೆ ಮೈಕೆಲ್ ಲೋಬೋ ಅವರನ್ನು ವಿರೋಧ ಪಕ್ಷದ ನಾಯಕ ಸ್ಥಾನ ದಿಂದ ತೆಗೆದುಹಾಕಿತ್ತು. ಆಡಳಿತಾರೂಢ ಬಿಜೆಪಿಯು ಹಣದ ಆಫರ್ ನೀಡುವ ಮೂಲಕ ಕಾಂಗ್ರೆಸ್ ನಾಯಕರನ್ನು ಸೆಳೆಯಲು ಯತ್ನಿಸ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.