Thursday, 24th October 2024

Justice Sanjiv Khanna: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನ. 11ರಂದು ಅಧಿಕಾರ ಸ್ವೀಕಾರ

Justice Sanjiv Khanna

ಹೊಸದಿಲ್ಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (Chief Justice of India) ಸಂಜೀವ್ ಖನ್ನಾ (Justice Sanjiv Khanna) ಅವರು ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY Chandrachud) ಅವರು 2024ರ ನವೆಂಬರ್ 10ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ.

ಈ ಕುರಿತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. “ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಈ ಮೂಲಕ ಸಂಜೀವ್ ಖನ್ನಾ ಅವರು ದೇಶದ 51ನೇ ಮುಖ್ಯ ನ್ಯಾಯಮೂರ್ತಿ ಎನಿಸಿಕೊಳ್ಳಲಿದ್ದಾರೆ. ಅವರು ಕೇವಲ 7 ತಿಂಗಳು ಅಧಿಕಾರದಲ್ಲಿ ಇರಲಿದ್ದು, 2025ರ ಮೇ 13ರಂದು ನಿವೃತ್ತರಾಗಲಿದ್ದಾರೆ. ಸಂಜೀವ್ ಖನ್ನಾ ಅವರನ್ನು 2019ರ ಜನವರಿಯಲ್ಲಿ ದಿಲ್ಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಮಾಡಲಾಗಿತ್ತು. ಅವರು 2023ರ ಜೂನ್‌ನಿಂದ ಡಿಸೆಂಬರ್‌ವರೆಗೂ ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರೂ ಆಗಿದ್ದರು.

ತಮ್ಮ ಉತ್ತರಾಧಿಕಾರಿಯನ್ನಾಗಿ ಜಸ್ಟೀಸ್‌ ಸಂಜೀವ್‌ ಖನ್ನಾ ಅವರನ್ನು ನೇಮಿಸುವಂತೆ ಶಿಫಾರಸ್ಸು ಮಾಡಿ ಡಿ.ವೈ. ಚಂದ್ರಚೂಡ್‌ ಅವರು ಕಾನೂನು ಸಚಿವಾಲಯಕ್ಕೆ ಕೆಲವು ದಿನಗಳ ಹಿಂದೆಯೇ ಪತ್ರ ಬರೆದಿದ್ದರು. ಇದೊಂದು ಸಾಂಪ್ರದಾಯಿಕ ಪ್ರಕ್ರಿಯೆಯಾಗಿದ್ದು, ನಿವೃತ್ತಿಯಾಗುತ್ತಿರುವ ಮುಖ್ಯನ್ಯಾಯಮೂರ್ತಿ ತಮ್ಮ ಉತ್ತರಾಧಿಕಾರಿಯನ್ನು ನಾಮನಿರ್ದೇಶನ ಮಾಡುವ ಅಧಿಕಾರ ಹೊಂದಿದ್ದಾರೆ. ಅವರ ಅನುಮೋದನೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತದೆ. ಡಿ.ವೈ. ಚಂದ್ರಚೂಡ್ ಅವರು 2022ರ ನವೆಂಬರ್ 9ರಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು 65ನೇ ವಯಸ್ಸಿಗೆ ನಿವೃತ್ತರಾಗುತ್ತಾರೆ.

ಈ ಸುದ್ದಿಯನ್ನೂ ಓದಿ: Supreme Court CJI: ಜಸ್ಟಿಸ್ ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ?